ADVERTISEMENT

ಆನೆ-ಮಾನವನ ನಡುವಿನ ಸಂಘರ್ಷ ತಪ್ಪಿಸಲು ಕ್ರಮ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2011, 19:30 IST
Last Updated 11 ಫೆಬ್ರುವರಿ 2011, 19:30 IST

ಬೆಂಗಳೂರು: ಆನೆಗಳು ಮತ್ತು ಮಾನವನ ನಡುವಿನ ಸಂಘರ್ಷ ತಪ್ಪಿಸುವ ದಿಸೆಯಲ್ಲಿ ತಾನು ಕೈಗೊಳ್ಳಲು ಉದ್ದೇಶಿಸಿರುವ ಕಾರ್ಯಕ್ರಮ ಕುರಿತು ನಾಲ್ಕು ವಾರಗಳಲ್ಲಿ ವಿಸ್ತೃತ ವರದಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದೆ.2008ರ ನವೆಂಬರ್‌ನಲ್ಲಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಆನೆಗಳ ಸರಣಿ ಸಾವು ಸಂಭವಿಸಿದ್ದಾಗ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡು, ವಿಚಾರಣೆ ಆರಂಭಿಸಿತ್ತು. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಮತ್ತು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ವಿಭಾಗೀಯ ಪೀಠದಲ್ಲಿ ಶುಕ್ರವಾರ ಈ ಪ್ರಕರಣದ ವಿಚಾರಣೆ ನಡೆಯಿತು.

‘ಆನೆಗಳು, ಮಾನವನ ನಡುವಿನ ಸಂಘರ್ಷ ತಪ್ಪಿಸಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ನಾಲ್ಕು ವಾರಗಳಲ್ಲಿ ಈ ಕುರಿತ ವಿಸ್ತೃತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
‘ಆದಷ್ಟು ಬೇಗ ಯೋಜನೆ ರೂಪಿಸಿ. ಅನುದಾನ ಪಡೆಯುವುದಕ್ಕೂ ಅವಕಾಶ ಕಲ್ಪಿಸಿ. ಈ ಸಮಸ್ಯೆ ಪರಿಹಾರಕ್ಕೆ ಏನಾದರೂ ಒಂದಷ್ಟು ಮಾಡೋಣ’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಮೂರ್ತಿ  ಕೇಹರ್ ಅವರು ವಿಚಾರಣೆಯನ್ನು ಮೂರು ತಿಂಗಳ ಕಾಲ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.