ADVERTISEMENT

ಆಯುಕ್ತ ಸಿದ್ದಯ್ಯಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 19:55 IST
Last Updated 17 ಏಪ್ರಿಲ್ 2013, 19:55 IST

ಬೆಂಗಳೂರು: ನಗರದ ವಸತಿ ಬಡಾವಣೆಯೊಂದರಲ್ಲಿ ನಿರ್ಮಿಸಿರುವ ಮೊಬೈಲ್ ಟವರ್‌ಅನ್ನು ತೆರವುಗೊಳಿಸುವ ಸಂಬಂಧ ಮೂರು ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶವನ್ನು ಪಾಲಿಸದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಸಿದ್ದಯ್ಯ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಜೆ.ಪಿ. ನಗರದ ಟಿ.ಕೆ. ದೀಪಕ್ ಬಡಾವಣೆಯ ವಸತಿ ಕಟ್ಟಡವೊಂದರ ಮೇಲೆ ಮೊಬೈಲ್ ಟವರ್ ನಿರ್ಮಿಸಿರುವುದನ್ನು ಪ್ರಶ್ನಿಸಿ, ಬಡಾವಣೆಯ ನಿವಾಸಿ ಬಿ.ಎಸ್. ಮಧುಸೂದನ ಸಿಂಗ್ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ಮೂರು ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ 2012ರ ನವೆಂಬರ್‌ನಲ್ಲಿ ಬಿಬಿಎಂಪಿಗೆ ಆದೇಶಿಸಿತ್ತು.

ಆದೇಶದ ಅನುಸಾರ ಪಾಲಿಕೆಯು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಸಿಂಗ್  ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಮತ್ತು ನ್ಯಾಯಮೂರ್ತಿ ಸಿ.ಆರ್. ಕುಮಾರಸ್ವಾಮಿ ಅವರನ್ನು ಒಳಗೊಂಡ ವಿಭಾಗೀಯ ಪೀಠ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೆ ಆದೇಶ ನೀಡಿತು. ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.