ADVERTISEMENT

ಆರ್‌ಟಿಒ ಭ್ರಷ್ಟಾಚಾರ: ಎಸಿಬಿ ತನಿಖೆಗೆ ಆದೇಶ

ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:30 IST
Last Updated 29 ಮೇ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪ್ರಾದೇಶಿಕ ಸಾರಿಗೆ ಇಲಾಖೆ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮಾಹಿತಿ ಹಕ್ಕು ಆಯೋಗ ನಿರ್ದೇಶನ ನೀಡಿದೆ.

’ಆರ್‌ಟಿಒ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದಿಂದಾಗಿ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗುತ್ತಿರುವ ಅಂಶ ಮೇಲ್ನೋಟಕ್ಕೆ ಕಂಡುಬರುತ್ತಿರುವುದರಿಂದ ಇದನ್ನು ವಿಶೇಷ ಪ್ರಕರಣವೆಂದು ‍ಪರಿಗಣಿಸಿ ಎಸಿಬಿ ತನಿಖೆಗೆ ಆದೇಶಿಸಲಾಗಿದೆ’ ಎಂದು ಮಾಹಿತಿ ಹಕ್ಕು ಆಯೋಗದ ಕಮಿಷನರ್‌ ಎನ್‌.ಪಿ. ರಮೇಶ್‌ ಆದೇಶದಲ್ಲಿ ತಿಳಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆ ಕಲಂ 19 (8)(ಎ) ಅಡಿ ದತ್ತವಾಗಿರುವ ಅಧಿಕಾರ ಬಳಸಿಕೊಂಡು ತನಿಖೆಗೆ ಆದೇಶ ನೀಡಲಾಗಿದೆ. ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ಈ ವಿಷಯದ ತನಿಖೆಯಲ್ಲಿ ಆಗುವ ಪ್ರಗತಿಯನ್ನು ಆಯೋಗಕ್ಕೆ ತಿಳಿಸಬೇಕು ಎಂದು ಎಸಿಬಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಆಯೋಗ ಸೂಚಿಸಿದೆ.

ADVERTISEMENT

ರಾಜ್ಯದ ವಿವಿಧ ಆರ್‌ಟಿಒ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಪ್ರಕಾಶರೆಡ್ಡಿ ಎಂಬುವವರು ಸಲ್ಲಿಸಿದ್ದ ಹಲವು ದೂರುಗಳ ವಿಚಾರಣೆ ನಡೆಸಿದ ಆಯೋಗ, ‘ಚೆಕ್‌ಪೋಸ್ಟ್‌ ಒಳಗೆ ಮತ್ತು ಹೊರಗೆ 360 ಡಿಗ್ರಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಅದರ ಕಾರ್ಯಕ್ಷಮತೆ ಹೆಚ್ಚು ಮಾಡಬೇಕು. ಸಿ.ಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಒಂದು ವರ್ಷದವರೆಗೆ ಸಂರಕ್ಷಿಸಿಡ
ಬೇಕು’ ಎಂದೂ ಆದೇಶಿಸಿದೆ.

ರಾಜ್ಯದ ವಿವಿಧ ಚೆಕ್‌ ಪೋಸ್ಟ್‌ಗಳಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ದೃಶ್ಯಾವಳಿಯ ಸಿ.ಡಿ. ಕೊಡುವಂತೆ ಪ್ರಕಾಶ ರೆಡ್ಡಿ ಸಾರಿಗೆ ಇಲಾಖೆಗೆ ಕೇಳಿದ್ದರು. ‘ಸಿ.ಸಿ.ಟಿ.ವಿ ಕ್ಯಾಮೆರಾಗಳು ಕೆಟ್ಟಿರುವುದರಿಂದ ಈ ದೃಶ್ಯಾವಳಿಗಳನ್ನು ಕೊಡಲು ಸಾಧ್ಯವಿಲ್ಲ’ ಎಂಬ ಒಂದೇ ಬಗೆಯ ಉತ್ತರವನ್ನು ಎಲ್ಲಾ ಮಾಹಿತಿ ಹಕ್ಕು ಅಧಿಕಾರಿಗಳು ನೀಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದ ವಿಡಿಯೊ ಹಾಗೂ ದಾಖಲೆಗಳನ್ನು ಅರ್ಜಿದಾರರು ಆಯೋಗಕ್ಕೆ ಸಲ್ಲಿಸಿದ್ದರು. ಇದನ್ನು ಆಯುಕ್ತರು ವೀಕ್ಷಿಸಿದರು.

‘ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತ ಕೊಡುವ ಉದ್ದೇಶದಿಂದ ಸರ್ಕಾರಿ ಕಚೇರಿ ಒಳಗೆ ಹಾಗೂ ಹೊರಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿರ್ದೇಶನವನ್ನು ಸಾರಿಗೆ ಇಲಾಖೆ ಉಲ್ಲಂಘಿಸಿದೆ. ಕೆಟ್ಟಿರುವ ಕ್ಯಾಮೆರಾಗಳ ದುರಸ್ತಿಗೆ ಕ್ರಮ ಕೈಗೊಳ್ಳದಿರುವ ಅಧಿಕಾರಿಗಳ ವರ್ತನೆ ಹಲವು ಅನುಮಾನಗಳಿಗೆ ಎಡೆ ಮಾಡುತ್ತದೆ’ ಎಂದೂ ಆಯೋಗ ಅಭಿಪ್ರಾಯಪಟ್ಟಿದೆ.

ಅರ್ಜಿದಾರರು ಕೇಳಿದ ಮಾಹಿತಿ ನೀಡಲು ನಿರಾಕರಿಸಿದ ಅಧಿಕಾರಿಗಳಿಗೆ ₹ 25 ಸಾವಿರ ದಂಡ ಏಕೆ ವಿಧಿಸಬಾರದು? ಶಿಸ್ತು ಕ್ರಮ ಏಕೆ ಕೈಗೊಳ್ಳಬಾರದು ಎಂದೂ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆಯೂ ಸೂಚಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.