ADVERTISEMENT

ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2012, 19:30 IST
Last Updated 1 ಜುಲೈ 2012, 19:30 IST
ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ
ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ   

ಯಲಹಂಕ: `ಒಂದು ಕಾಲದಲ್ಲಿ ಅಮೆರಿಕದಿಂದ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತವು ಪ್ರಸ್ತುತ ಅಗತ್ಯವಿರುವಷ್ಟು ಆಹಾರ ಧಾನ್ಯಗಳನ್ನು ಉತ್ಪಾದಿಸುವ ಮೂಲಕ ಸ್ವಾವಲಂಬನೆಯತ್ತ ದಾಪುಗಾಲು ಹಾಕುತ್ತಿದೆ~ ಎಂದು ರಾಜ್ಯಪಾಲ ಡಾ.ಎಚ್.ಆರ್. ಭಾರದ್ವಾಜ್ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯವು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, `ಆಹಾರ ಭದ್ರತೆಯಲ್ಲಿ ಕೃಷಿ ವಿಜ್ಞಾನಿಗಳ ಪಾತ್ರ ಬಹಳ ಮುಖ್ಯ. ಈ ದಿಸೆಯಲ್ಲಿ ದೇಶದ ವಿಜ್ಞಾನಿಗಳು ಕಾರ್ಯಪ್ರವೃತ್ತರಾಗಬೇಕು~ ಎಂದು ಸಲಹೆ ನೀಡಿದರು.

`ಕಳೆದ ವರ್ಷದಂತೆ ಈ ವರ್ಷವೂ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಮುಖ್ಯಮಂತ್ರಿ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತುನೀಡುವ ಮೂಲಕ ಆಹಾರ ಭದ್ರತೆಯನ್ನು ಕಾಯ್ದುಕೊಳ್ಳಬೇಕು~ ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಮಹಾನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹಾಗೂ ಕಾರ್ನೆಲ್ ವಿಶ್ವವಿದ್ಯಾಲಯದ (ಅಮೆರಿಕ) ಅಂತರರಾಷ್ಟ್ರೀಯ ಕಾರ್ಯಕ್ರಮಗಳ ನಿರ್ದೇಶಕ ಡಾ.ವಿಲಿಯಂ ರೋನಿ ಕಾಫ್‌ಮನ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಆರ್.ಹಂಚಿನಾಳ, ಆಡಳಿತ ಮಂಡಳಿ ಸದಸ್ಯರಾದ ಮುರಳೀಧರ ಬೆಳ್ಳೂರು, ಸ್ನಾತಕೋತ್ತರ ವಿಭಾಗದ ಡೀನ್ ಡಾ.ಬಿ.ಎಂ.ಖಾದಿ, ಬೆಂಗಳೂರು ಕೃಷಿ ವಿ.ವಿ ಕುಲಪತಿ ಡಾ.ಕೆ.ನಾರಾಯಣಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.