ಬೆಂಗಳೂರು: ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದಿಂದಾಗಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಭೌತವಿಜ್ಞಾನ ವಿಷಯದ ಪರೀಕ್ಷೆ ಮಂಗಳವಾರ ನಡೆಯಲಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮೂಲಕ ಸೋಮವಾರ ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲ್ಲೂಕು ಖಜಾನೆಗಳಿಗೆ ರವಾನಿಸಲಾಗಿದೆ.
ಗಣಿತ, ಭೌತವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಬಹಿರಂಗವಾದ ಹಿನ್ನೆಲೆಯಲ್ಲಿ ಈ ಬಾರಿ ಪ್ರಶ್ನೆಪತ್ರಿಕೆಗಳ ಸಾಗಾಣಿಕೆಯಿಂದ ಹಿಡಿದು, ಪರೀಕ್ಷಾ ಕೇಂದ್ರಗಳವರೆಗೂ ಬಿಗಿ ಕ್ರಮಕೈಗೊಳ್ಳಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭೌತವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಯನ್ನು ಹೊಸದಾಗಿ ಸಿದ್ಧಪಡಿಸಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಬೆಂಗಳೂರಿನಿಂದ ರವಾನಿಸಲಾಯಿತು.
ತನಿಖಾ ತಂಡಗಳ ಮೇಲ್ವಿಚಾರಣೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಕಳುಹಿಸಲಾಗಿದ್ದು, ಯಾವುದೇ ದೂರುಗಳು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.ಮಂಗಳವಾರ ಭೌತ ವಿಜ್ಞಾನದ ಜೊತೆಗೆ ತರ್ಕಶಾಸ್ತ್ರ, ಶಿಕ್ಷಣ ವಿಷಯದ ಪರೀಕ್ಷೆಯೂ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.