ADVERTISEMENT

ಇಸ್ಕಾನ್ ದೇಗುಲ ಸುತ್ತಮುತ್ತ ಜೂ.9ರವರೆಗೆ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2011, 19:30 IST
Last Updated 5 ಜೂನ್ 2011, 19:30 IST

ಬೆಂಗಳೂರು: ಮುಂಬೈ ಇಸ್ಕಾನ್ ಮೇಲ್ವಿಚಾರಣಾ ಸಮಿತಿ ಸದಸ್ಯರು ಮತ್ತು ಬೆಂಗಳೂರು ಇಸ್ಕಾನ್ ಶಾಖೆಯ ಸದಸ್ಯರ ನಡುವೆ ಜಟಾಪಟಿ ನಡೆದಿದ್ದ ಹಿನ್ನೆಲೆಯಲ್ಲಿ ನಗರ ಪೊಲೀಸರು ಸ್ಥಳೀಯ ಶಾಖೆಯ ಸುತ್ತಮುತ್ತ ಭಾನುವಾರ ಬೆಳಿಗ್ಗೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ರಾಜಾಜಿನಗರದ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ಶಾಖೆ ಸುತ್ತಮುತ್ತ ಜೂ.9ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಶಾಖೆಯ ಆಸ್ತಿ ವಿಷಯವಾಗಿ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಖೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಲ್ಕು ಮಂದಿ ಇನ್‌ಸ್ಪೆಕ್ಟರ್‌ಗಳು, ಎಂಟು ಮಂದಿ ಸಬ್ ಇನ್‌ಸ್ಪೆಕ್ಟರ್‌ಗಳು, ಮುಖ್ಯ ಕಾನ್‌ಸ್ಟೆಬಲ್‌ಗಳು ಹಾಗೂ ಕಾನ್‌ಸ್ಟೆಬಲ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಒಂದು ತುಕಡಿಯನ್ನು ಸಹ ಭದ್ರತೆಗೆ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಇಸ್ಕಾನ್ ಶಾಖೆಯ ಬಳಿ ಪ್ರತಿಭಟನೆ ಹಾಗೂ ರ‌್ಯಾಲಿ ನಡೆಸುವುದನ್ನು ನಿರ್ಬಂಧಿಸಲಾಗಿದೆ. ಅಂತೆಯೇ ಶಾಖೆಯ ಸಮೀಪ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಶಾಖೆಗೆ ಬರುವ ಭಕ್ತಾದಿಗಳು ಸಿಬ್ಬಂದಿಯ ಅನುಮತಿ ಪಡೆದು ಒಳ ಹೋಗಬೇಕು. ಭಕ್ತಾದಿಗಳ ತಪಾಸಣೆ ನಡೆಸಿ ಒಳಗೆ ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿಷೇಧಾಜ್ಞೆ ಉಲ್ಲಂಘಿಸಿ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.