ADVERTISEMENT

ಉಪಚುನಾವಣೆ: 25ರಂದು ದೆಹಲಿಯಲ್ಲಿ ಕಾಂಗ್ರೆಸ್ ಸಭೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2013, 19:59 IST
Last Updated 20 ಜುಲೈ 2013, 19:59 IST

ಬೆಂಗಳೂರು: `ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧವಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಇದೇ 25ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೆಹಲಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೂ ಭಾಗವಹಿಸಲಿದ್ದಾರೆ. ಉಪಚುನಾವಣೆಯ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ತಂತ್ರಗಳ ಬಗ್ಗೆ ಚರ್ಚಿಸಲಾಗುವುದು ಎಂದು ಗೃಹ ಕಚೇರಿ `ಕೃಷ್ಣಾ'ದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಉಪ ಚುನಾವಣೆ ಕುರಿತು ಪಕ್ಷದ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, `ಪಕ್ಷ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಲಾಗುವುದು' ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಿ.ಎಂ.ಲಿಂಗಪ್ಪ, ತೇಜಸ್ವಿನಿಗೌಡ, ಮಂಡ್ಯಗೆ ಎಲ್.ಆರ್.ಶಿವರಾಮೇಗೌಡ, ಮಾಜಿ ಸ್ಪೀಕರ್ ಕೃಷ್ಣ ಅವರ ಹೆಸರುಗಳು ಕಾಂಗ್ರೆಸ್‌ನಿಂದ ಕೇಳಿಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.