ಬೆಂಗಳೂರು: ‘ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ರೈಲ್ವೆ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಯಲಹಂಕ ಸಮೀಪದ ರೇವಾ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ‘ಸ್ನಾತಕೋತ್ತರ ಪದವಿಯ ಪ್ರಥಮ ಘಟಿಕೋತ್ಸವ’ ಸಮಾರಂಭದಲ್ಲಿ ಮಾತನಾಡಿದರು.
‘ಶಿಕ್ಷಣ ದೇಶದ ಪ್ರಗತಿಯ ಬೆನ್ನೆಲುಬಾಗಿದೆ. ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉನ್ನತ ಶಿಕ್ಷಣದಲ್ಲಿ ಹಿಂದುಳಿದಿದೆ. ಗುಣಮಟ್ಟದ ಶಿಕ್ಷಣ ನೀಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಎಲ್ಲ ವಿಶ್ವವಿದ್ಯಾಲಯಗಳ ಪ್ರವೇಶಾತಿ, ನೇಮಕಾತಿಯನ್ನು ಆನ್‌ಲೈನ್ ಮೂಲಕ ಮಾಡಲು ಕ್ರಮಕೈಗೊಳ್ಳಲಾಗಿದೆ’ ಎಂದು ಹೇಳಿದರು.
ರಾಜ್ಯಪಾಲ ವಜುಭಾಯಿ ವಾಲಾ ಮಾತನಾಡಿ, ‘ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅನಾದಿ ಕಾಲದಿಂದಲೂ ಮುಂದಿದೆ. ಇಸ್ರೋ ಕಡಿಮೆ ವೆಚ್ಚದಲ್ಲಿ ಉಪಗ್ರಹಗಳನ್ನು ಉಡಾಯಿಸುವ ಮೂಲಕ ಜಗತ್ತಿನ ಬಲಾಢ್ಯ ರಾಷ್ಟ್ರಗಳಿಗೆ ಪೈಪೋಟಿ ನೀಡುತ್ತಿದೆ’ ಎಂದರು.
‘ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇಟ್ಟುಕೊಂಡು ಅಧ್ಯಯನಶೀಲರಾಗ ಬೇಕು. ವ್ಯಸನಗಳಿಗೆ ದಾಸರಾಗದೆ ಉತ್ತಮ ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಒಂಬತ್ತು ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಲಾಯಿತು. 176 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.