ADVERTISEMENT

ಐಟಿ ಬಳಕೆಯಲ್ಲಿ ಶಿಕ್ಷಣ ಕ್ಷೇತ್ರ ಹಿಂದೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2011, 19:30 IST
Last Updated 6 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ (ಐಸಿಟಿ) ಬಳಕೆ ಖಾಸಗಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿದ್ದರೂ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಇದು ನಿರೀಕ್ಷಿತ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಬೆಂಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಮಾಹಿತಿ ತಂತ್ರಜ್ಞಾನ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

 `ಶಿಕ್ಷಣ ಕ್ಷೇತ್ರದಲ್ಲಿ ಐಸಿಟಿ ಬಳಕೆ ಹೆಚ್ಚಾದಂತೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ~ ಎಂದು ಹೇಳಿದರು. ದೇಶದ ಎಲ್ಲ ಉನ್ನತ ಶಿಕ್ಷಣ ಕೇಂದ್ರಗಳಲ್ಲೂ ಲಭ್ಯವಿರುವ ಕೇಂದ್ರೀಕೃತ ಮಾಹಿತಿ ಕೋಶವೊಂದರ ಸ್ಥಾಪನೆಗೂ ಐಸಿಟಿ ನೆರವಾಗಲಿದೆ. ಕಲಿಕೆಯ ಪ್ರಕ್ರಿಯೆ ಇಂಟರ್‌ನೆಟ್ ಆಧರಿಸಿ ನಡೆಯಲಿದೆ. ಶಿಕ್ಷಣದ ಪ್ರಕ್ರಿಯೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗುವುದರ ಜೊತೆಗೆ ಮಾಹಿತಿ ಪಡೆದುಕೊಳ್ಳುವ ಕಾರ್ಯ ಸುಲಭವಾಗಲಿದೆ ಎಂದರು.

ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಉಪನ್ಯಾಸಕರು ತಮ್ಮ ಪಠ್ಯಕ್ರಮಗಳನ್ನು ಕಾಲದ ಅಗತ್ಯಗಳಿಗೆ ತಕ್ಕಂತೆ ಮಾರ್ಪಾಡು ಮಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.
ಪರಿಷತ್ತಿನ ಉಪಾಧ್ಯಕ್ಷ ಡಾ.ಎಸ್. ಸಿ. ಶರ್ಮಾ ಮಾತನಾಡಿ, `ಮಾನವಿಕ ಮತ್ತು ಜೀವ ವಿಜ್ಞಾನ ಕೋರ್ಸ್‌ಗಳಿಗೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಅರಿವು ಅತ್ಯಗತ್ಯ~ ಎಂದರು. ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಪ್ರೊ.ಎಂ. ಕಾವೇರಿಯಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.