ADVERTISEMENT

ಕನಕಪುರ ಕ್ಷೇತ್ರಕ್ಕೆ ರೂ 130 ಕೋಟಿ ಕೋರಿಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 19:40 IST
Last Updated 1 ಜುಲೈ 2013, 19:40 IST

ಬೆಂಗಳೂರು: ಕನಕಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 130 ಕೋಟಿ ರೂಪಾಯಿ ಅನುದಾನವನ್ನು ಬಜೆಟ್‌ನಲ್ಲೇ ಒದಗಿಸುವಂತೆ ಕನಕಪುರ ಶಾಸಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಂಜೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಿವಕುಮಾರ್ ಕೆಲಕಾಲ ಚರ್ಚೆ ನಡೆಸಿದರು. ಕನಕಪುರದಲ್ಲಿ ಮಿನಿ ವಿಧಾನಸೌಧ ನಿರ್ಮಾಣ, ಕೆಲವು ಪ್ರಮುಖ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಬಾಕಿ ಇರುವ ಕಾಮಗಾರಿಗಳಿಗೆ ಬಜೆಟ್‌ನಲ್ಲೇ ಅನುದಾನ ಒದಗಿಸುವಂತೆ ಕೋರಿದ್ದಾರೆ.

ಈ ಕುರಿತು `ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಶಿವಕುಮಾರ್, `ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ಅವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ' ಎಂದರು.

ರಾಜಕೀಯ ಚರ್ಚೆ: ಇಬ್ಬರ ಭೇಟಿ ವೇಳೆ ರಾಜಕೀಯ ವಿಚಾರ ಬಗ್ಗೆಯೂ ಚರ್ಚೆ ನಡೆದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಭೇಟಿ, ಸಂಪುಟ ವಿಸ್ತರಣೆ ಕುರಿತು ವಿಚಾರ ವಿನಿಮಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಂಪುಟ ಸೇರಲು ಅವಕಾಶ ಪಡೆಯುವುದಕ್ಕೆ ಪೂರಕವಾಗಿ ಮುಖ್ಯಮಂತ್ರಿಯವರ ಜೊತೆ ಸಂಬಂಧ ವೃದ್ಧಿಗೆ ಶಿವಕುಮಾರ್ ಪ್ರಯತ್ನಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.