ADVERTISEMENT

ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2011, 19:45 IST
Last Updated 10 ಫೆಬ್ರುವರಿ 2011, 19:45 IST

ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸದಸ್ಯರು ನಗರದ ಚಿಕ್ಕಲಾಲ್‌ಬಾಗ್‌ನಿಂದ ಗಾಂಧಿನಗರದ ಕಾಳಿದಾಸ ವೃತ್ತದವರೆಗೆ ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್, ‘ರಾಜ್ಯ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 8 ಸಾವಿರ ರೂಪಾಯಿ ವೇತನ ನಿಗದಿಪಡಿಸಬೇಕು. ಎಲ್ಲ ಕಾರ್ಮಿಕರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು. ‘ಕಾರ್ಮಿಕರಿಗೆ ಪಿಂಚಣಿ, ಹೆರಿಗೆ ಭತ್ಯೆ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಆರೋಗ್ಯ ವಿಮೆ, ಭವಿಷ್ಯ ನಿಧಿ, ಇಎಸ್‌ಐ ಸೌಲಭ್ಯಗಳನ್ನು ಕಲ್ಪಿಸಬೇಕು.

ಖಾಸಗಿ ವಲಯದಲ್ಲಿ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಏರಿಸಲು ಸೂಕ್ತ ಕಾನೂನನ್ನು ಜಾರಿಗೆ ತರಬೇಕು. ಗುತ್ತಿಗೆ ಆಧಾರದ ಮೇಲೆ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು. ಸಿಪಿಐ ರಾಜ್ಯ ಮಂಡಳಿಯ ಕಾರ್ಯದರ್ಶಿ ಸಿದ್ಧನಗೌಡ ಪಾಟೀಲ್ ಮಾತನಾಡಿ, ‘ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.

ರಾಜ್ಯದ ಕಾರ್ಮಿಕ ಇಲಾಖೆ ಮತ್ತು ಇತರೆ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು. ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿ, ಗಣಿ ಕಾರ್ಮಿಕರನ್ನು ರಕ್ಷಿಸಬೇಕು. ಅಂಗನವಾಡಿ, ಬಿಸಿಯೂಟ, ಬೀಡಿ ಉದ್ಯಮದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಮತ್ತು ಹಮಾಲಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಸಚಿವ ಎ.ನಾರಾಯಣಸ್ವಾಮಿ ಅವರು ಮನವಿ ಪತ್ರ ಸ್ವೀಕರಿಸಿ, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.