ADVERTISEMENT

ಕನ್ನಡಕ್ಕಾಗಿ ಪಕ್ಷಗಳು ದನಿ ಎತ್ತಲಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 20:03 IST
Last Updated 6 ಸೆಪ್ಟೆಂಬರ್ 2013, 20:03 IST

ಚನ್ನಪಟ್ಟಣ: `ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಅನ್ಯಾಯವಾದಾಗ ಯಾವುದೇ ರಾಜಕೀಯ ಪಕ್ಷಗಳು ದನಿ ಎತ್ತುವುದಿಲ್ಲ. ಕನ್ನಡ ಪರ ಸಂಘಟನೆಗಳು ಮಾತ್ರ ದನಿ ಎತ್ತುತ್ತವೆ' ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.

ಪಟ್ಟಣದ ಪುರಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಕದಂಬ ಸೈನ್ಯದ ಎರಡನೇ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳು ಶ್ರಮ ವಹಿಸುತ್ತಿದ್ದು, ರಾಜಕೀಯ ಪಕ್ಷಗಳು ಕೇವಲ ರಾಜಕೀಯದಲ್ಲಿ ತೊಡಗಿವೆ ಎಂದು ಟೀಕಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನೀಡುವ ಮೂಲಕ ಕನ್ನಡಭಾಷೆಯನ್ನು ಬೆಳೆಸಲು ಸಂಘಸಂಸ್ಥೆಗಳು ಶ್ರಮಿಸುತ್ತಿರುವುದು ಸ್ವಾಗತಾರ್ಹ ವಿಚಾರ. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಕನ್ನಡವನ್ನು ಉಳಿಸಿ ಬೆಳೆಸಲು ಎಲ್ಲರೂ ಪ್ರಯತ್ನಿಸಬೇಕು ಎಂದರು.

ಕಡಿಮೆ ಹಾಜರಾತಿ ಇರುವ ಕನ್ನಡ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವುದು ದುರದೃಷ್ಟಕರ ಸಂಗತಿ. ಸರ್ಕಾರ ಈ ವಿಷಯದಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಪುಂಡಲೀಕ ಹಾಲಂಬಿ ಆಗ್ರಹಿಸಿದರು.

ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಮಾತನಾಡಿ, ಕದಂಬ ಸೈನ್ಯವು ಕನ್ನಡಕ್ಕೆ ಒದಗುತ್ತಿರುವ ಸಮಸ್ಯೆಗಳ ವಿರುದ್ಧ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಜಾನಪದ ಗಾಯಕರು ಗೀತಗಾಯನ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.