ADVERTISEMENT

ಕನ್ನಡ ಚಳುವಳಿಗಾರರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2012, 19:55 IST
Last Updated 7 ಜನವರಿ 2012, 19:55 IST

ಬೆಂಗಳೂರು:  ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ 371ನೇ ಕಲಂನ ತಿದ್ದುಪಡಿ ಅನ್ವಯ ವಿಶೇಷ ಸ್ಥಾನಮಾನ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಶನಿವಾರ ನಗರದ ರೈಲು ನಿಲ್ದಾಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಇದನ್ನು ಪ್ರಾಮಾಣಿಕವಾಗಿ ಪರಿಗಣಿಸಿಲ್ಲ. ಜನವರಿ ಮೂರನೇ ವಾರದಲ್ಲಿ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ.

ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಫೆಬ್ರುವರಿಯಲ್ಲಿ ಕರ್ನಾಟಕ ಬಂದ್ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವಿಷಯಕ್ಕೆ ಸಂಬಂಧಿಸಿದ ವರದಿಗಳು ದೂಳು ಹಿಡಿದಿವೆ. ಈ ಬಾರಿಯ ಸಂಸತ್ತಿನ ಅಧಿವೇಶನದಲ್ಲೂ ವಿಷಯವನ್ನು ಮಂಡಿಸಿರದ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

 ಮೈಸೂರು ಬ್ಯಾಂಕ್ ವೃತ್ತದಿಂದ  ಮೆಜೆಸ್ಟಿಕ್ ರೈಲು ನಿಲ್ದಾಣದವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು. ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ, ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ ಸೇರಿದಂತೆ ಹಲವು ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.