ADVERTISEMENT

ಕಲುಷಿತ ರಾಜಕಾರಣದ ವಿರುದ್ಧ ರಾಲಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2013, 19:56 IST
Last Updated 10 ಫೆಬ್ರುವರಿ 2013, 19:56 IST
ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿ ಜಮಾತ್-ಎ-ಇಸ್ಲಾಮಿ ಹಿಂದ್ ಸಂಘಟನೆ ಸದಸ್ಯರು ನಗರದ ದಂಡು ರೈಲು ನಿಲ್ದಾಣದ ಬಳಿ ಭಾನುವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು 	-ಪ್ರಜಾವಾಣಿ ಚಿತ್ರ
ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿ ಜಮಾತ್-ಎ-ಇಸ್ಲಾಮಿ ಹಿಂದ್ ಸಂಘಟನೆ ಸದಸ್ಯರು ನಗರದ ದಂಡು ರೈಲು ನಿಲ್ದಾಣದ ಬಳಿ ಭಾನುವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿ ಜಮಾತ್-ಎ-ಇಸ್ಲಾಮಿ ಹಿಂದ್ ಸಂಘಟನೆ ಸದಸ್ಯರು ನಗರದಲ್ಲಿ ಭಾನುವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು.
ಮಿಲ್ಲರ್ಸ್‌ ರಸ್ತೆಯಿಂದ ರ‌್ಯಾಲಿ ಆರಂಭಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿಕೊಂಡು ಕ್ವೀನ್ಸ್ ರಸ್ತೆ, ಕನ್ನಿಂಗ್ ಹ್ಯಾಂ ಮಾರ್ಗವಾಗಿ ಈದ್ಗಾ ಮೈದಾನ ಸೇರಿ ಸಮಾವೇಶ ನಡೆಸಿದರು.

ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಮೌಲಾನಾ ಸೈಯದ್ ಜಲಾಲುದ್ದಿನ್ ಮಾತನಾಡಿ, `ದೇಶದಲ್ಲಿ ಮುಸ್ಲಿಂ ಯುವಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಅವರನ್ನು ಬಂಧಿಸಲಾಗುತ್ತಿದೆ. ಈ ಮೂಲಕ ಮಾನವ ಹಕ್ಕುಗಳ ದಮನ ಮಾಡಲಾಗುತ್ತಿದೆ. ಬಂಡವಾಳಶಾಹಿಗಳ ಪರವಾದ ಧೋರಣೆಗಳನ್ನು ಹೊಂದಿರುವ ಸರ್ಕಾರಕ್ಕೆ ಜನ ಸಾಮನ್ಯರ ಕೂಗು ಕೇಳಿಸುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

`ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಮಹಿಳೆಯರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ನಾಗರಿಕರನ್ನು ಕಾಪಾಡಬೇಕಾದ ರಾಜಕಾರಣಿಗಳು ಅಧಿಕಾರಕ್ಕಾಗಿ ಕಾದಾಡುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ತಲ್ಲೆನರಾಗಿರುವ ಸಚಿವರು, ಶಾಸಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಸಮಾಜದ ನೈಜ ಪರಿಸ್ಥಿತಿಯ ಅರಿವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ತಮ್ಮ ಮೂಲಭೂತ ಹಕ್ಕುಗಾಳಿಗಾಗಿ ಹೋರಾಟ ಮಾಡಬೇಕಾದ ಅಗತ್ಯವಿದೆ' ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಜಾವಿದ್ ಕರೆ ನೀಡಿದರು.

ಸಂಘಟನೆಯ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಮಹಮ್ಮದ್ ಜಾಫರ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನುಸ್ರತ್ ಆಲಿ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.