ADVERTISEMENT

ಕಾಡುಗೊಲ್ಲರ ಅಧ್ಯಯನ ವರದಿ ಪರಿಶೀಲಿಸಿ ಕ್ರಮ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2011, 19:30 IST
Last Updated 1 ಮಾರ್ಚ್ 2011, 19:30 IST


ಬೆಂಗಳೂರು: ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ನೀಡಲು ಮೈಸೂರು ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿದೆ. ವರದಿ ಬಂದ ನಂತರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಮಂಗಳವಾರ ವಿಧಾನ ಸಭೆಯಲ್ಲಿ ತಿಳಿಸಿದರು.

ವಿರೋಧ ಪಕ್ಷದ ಉಪ ನಾಯಕ ಟಿ.ಬಿ.ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಮೈಸೂರು ವಿಶ್ವವಿದ್ಯಾಲಯದ ವರದಿ ನಂತರ ಪರಿಶಿಷ್ಟ ಜಾತಿ/ವರ್ಗಗಳ ಆಯೋಗದ ಅಭಿಪ್ರಾಯವನ್ನು ಪಡೆದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಕೇಂದ್ರಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದರು.

ಫೆ.19ರಂದು ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ಹೊರಡಿಸಲಾಗಿದೆ. ಕಾಡುಗೊಲ್ಲ ಜನಾಂಗದ ಸಮಗ್ರ ಅಭಿವೃದ್ಧಿ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದ್ದು, ಅದನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.

ಗೊಲ್ಲರ ಹಟ್ಟಿಗಳ ಅಭಿವೃದ್ಧಿಗೆ 2010-11ರಲ್ಲಿ ಎರಡು ಕೋಟಿ ನೀಡಲಾಗಿತ್ತು. 2011-12ರಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿಗೆ ಐದು ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.