ಹೊಸಕೋಟೆ: ವರ್ತೂರು ಕೆರೆಯ ಹೆಚ್ಚುವರಿ ನೀರನ್ನು ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿ ಹೋಬಳಿಯ 30 ಕೆರೆಗಳಿಗೆ ಹರಿಸುವ ಸಂಬಂಧ 54 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿ 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಪಂಚಾಯಿತಿ ಕಟ್ಟಡ, ಸಮುದಾಯ ಭವನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. 133 ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಅದರಲ್ಲಿ 43 ವಿಫಲವಾಗಿವೆ. ನೀರಿನ ಸಮಸ್ಯೆಯಿರುವ ಕಡೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರೂ. 5 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ರೂ. 65 ಲಕ್ಷ ವೆಚ್ಚದಲ್ಲಿ ವಾಗಟ ಜಡಿಗೇನಹಳ್ಳಿ ರಸ್ತೆ ಅಭಿವೃದ್ಧಿ ಸೇರಿದಂತೆ ಜಡಿಗೇನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ 175 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ನುಡಿದರು. ಯೋಜನಾ ಪ್ರಾಧಿಕಾರ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು 10 ಕೋಟಿ ರೂಪಾಯಿಗಳನ್ನು ನೀಡಿದ್ದು, ಅದರಲ್ಲಿ ಪ್ರತಿ ಪಂಚಾಯಿತಿಗೆ 25 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ನಾರಾಯಣಸ್ವಾಮಿ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷ ಜೆ.ವೈ. ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಟಿ.ಸೊಣ್ಣಪ್ಪ, ಗ್ರಾ.ಪಂ. ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ. ತಾ.ಪಂ. ಅಧ್ಯಕ್ಷ ಟಿ.ಎಸ್‌ರಾಜಶೇಖರ್, ಉಪಾಧ್ಯಕ್ಷೆ ಛಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ವಿಜಯಕುಮಾರ್, ಜಿ.ಪಂ.ಸದಸ್ಯೆ ವೆಂಕಟಲಕ್ಷ್ಮಮ್ಮ ಮತ್ತಿತರರು ಇದರು.
ಆತ್ಮಹತ್ಯೆ: ಪಟ್ಟಣದ ಗಣೇಶ ಭವನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಗೇಪಲ್ಲಿ ಮೂಲದ ರಾಜೇಶ್ (40) ಎಂಬಾತ ಗುರುವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಿಂದ ಬೇಸತ್ತು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.