ADVERTISEMENT

ಕೆಐಎಡಿಬಿ ಭೂಹಗರಣ: ಜಾಮೀನು ರದ್ದತಿ ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಬೆಂಗಳೂರು: ಕೆಐಎಡಿಬಿ ಭೂಹಗರಣದ ಆರೋಪಿ, ಬಂಡಿಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ಕೆ.ಮಂಜುನಾಥ್ ಅವರ ಜಾಮೀನು ರದ್ದತಿಗೆ ಕೋರಿ ಪ್ರಕರಣದ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮಧುಮತಿ ಎಂಬುವರು ಸೋಮವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಅವರ ಪುತ್ರ, ಪಾಲಿಕೆ ಸದಸ್ಯ ಕಟ್ಟಾ ಜಗದೀಶ್ ಅವರ ಜೊತೆ ಕೆಐಎಡಿಬಿ ಭೂ ಹಗರಣದಲ್ಲಿ ಷಾಮೀಲಾದ ಆರೋಪ ಮಂಜುನಾಥ್ ಮೇಲಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಆಧರಿಸಿ ವಿಚಾರಣೆ ಆರಂಭಿಸಿರುವ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಆಗಸ್ಟ್ 8ರಂದು ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು.

ಸೋಮವಾರ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಿರುವ ಮಧುಮತಿ, ಮಂಜುನಾಥ್ ತಮಗೆ ಬೆದರಿಕೆ ಒಡ್ಡುತ್ತಿದ್ದು, ಅವರ ಜಾಮೀನು ರದ್ದು ಮಾಡುವಂತೆ ಕೋರಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಆರೋಪಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.