ADVERTISEMENT

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2013, 19:30 IST
Last Updated 22 ಡಿಸೆಂಬರ್ 2013, 19:30 IST

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದಲ್ಲಿ ಶನಿವಾರ ಮುಖ್ಯಮಂತ್ರಿ ನಿವಾಸ ‘ಕಾವೇರಿ’ ಎದುರು ಪ್ರತಿಭಟನೆ ಮಾಡಲು ಮುಂದಾದ ಲೋಕಸತ್ತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಶಿವಾನಂದ ವೃತ್ತದಿಂದ ಮುಖ್ಯಮಂತ್ರಿಗಳ ನಿವಾಸದವರೆಗೆ ರ್‌್ಯಾಲಿ ಮಾಡಲೆತ್ನಿಸಿದ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದರಿಂದ ಸ್ಥಳದಲ್ಲಿ ಗೊಂದಲದ ವಾತಾ­ವರಣ ನಿರ್ಮಾಣವಾಗಿತ್ತು. ಬಳಿಕ ಪ್ರತಿಭಟ­ನಾಕಾರರನ್ನು ಆಡುಗೋಡಿಯ ಪೊಲೀಸ್‌ ಮೈದಾನಕ್ಕೆ ಕರೆದೊಯ್ದು ಸಂಜೆ ಬಿಡುಗಡೆಗೊಳಿಸಲಾಯಿತು.

2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸಿ ಸರ್ಕಾರಕ್ಕೆ ಸೆ.10ರಂದು ವರದಿ ಸಲ್ಲಿಸಿದ್ದಾರೆ. ಆದರೆ, ತಪ್ಪಿತಸ್ಥರ ವಿರುದ್ಧ ಸರ್ಕಾರ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಪಕ್ಷದ ರಾಜ್ಯ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ರವಿ ಕೃಷ್ಣಾರೆಡ್ಡಿ ದೂರಿದರು.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿಐಡಿ ಪೊಲೀಸರು ಸರ್ಕಾರದ ಅನುಮತಿ ಕೋರಿದ್ದಾರೆ. ತಪ್ಪಿತಸ್ಥರನ್ನು ರಕ್ಷಿಸುವ ಉದ್ದೇಶದಿಂದ ಆರೋಪಪಟ್ಟಿ ಸಲ್ಲಿಕೆಗೆ ಸರ್ಕಾರ ಈವರೆಗೂ ಅನುಮತಿ ನೀಡಿಲ್ಲ ಎಂದು ಆರೋಪಿಸಿದರು. 2011ರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸ­ಬೇಕು. ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಮಾದರಿಯಲ್ಲಿ ನೇಮಕಾತಿ ನಡೆಸಬೇಕು. ಪ್ರಾಮಾಣಿ­ಕವಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಮತ್ತೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.