ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಬುಧವಾರ ಸಂಜೆ ಪ್ರಕಟಿಸಿದೆ.
ಈ ಪಟ್ಟಿಯ ಬಗ್ಗೆ ಆಕ್ಷೇಪಗಳು ಇದ್ದರೆ 15 ದಿನಗಳಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಹಾಗೂ ಹೈಕೋರ್ಟ್ಗಳಲ್ಲಿ ಕೆಲವು ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು ಈ ಪಟ್ಟಿ ಕೋರ್ಟ್‌ಗಳು ನೀಡುವ ಆದೇಶಕ್ಕೆ ಬದ್ಧವಾಗಿರುತ್ತದೆ ಎಂದೂ ಸ್ಪಷ್ಟನೆ ನೀಡಿದೆ.
2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಹೇಳಿರುವ ಸಿಐಡಿ ಪೊಲೀಸರು ಆಯೋಗದ ಮಾಜಿ ಅಧ್ಯಕ್ಷ ಗೋನಾಳ ಭೀಮಪ್ಪ, ಸದಸ್ಯೆ ಡಾ.ಮಂಗಳಾ ಶ್ರೀಧರ್ ಮತ್ತು ಆಯೋಗದ ಕೆಲವು ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದರು. ಮಂಗಳಾ ಶ್ರೀಧರ್ ಅವರನ್ನು ಅಮಾನತುಗೊಳಿಸಲು ರಾಜ್ಯಪಾಲರು ಶಿಫಾರಸು ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.