ADVERTISEMENT

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ- ಆಚಾರ್ಯ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2011, 19:05 IST
Last Updated 28 ಫೆಬ್ರುವರಿ 2011, 19:05 IST

ಬೆಂಗಳೂರು: ಸಂವಿಧಾನದ 371ನೇ ವಿಧಿ ಅಡಿ ಹೈದರಾಬಾದ್- ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಮಾರ್ಚ್‌ನಲ್ಲಿ ಸರ್ವ ಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಮನೋಹರ ಮಸ್ಕಿ ಅವರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ನಿಯೋಗ ಕರೆದೊಯ್ಯುವ ಕುರಿತು ಭರವಸೆ ನೀಡಿದರು.

‘ಕೇಂದ್ರ  ಗೃಹಸಚಿವ  ಪಿ.ಚಿದಂಬರಂ ಅವರು ಹೈದರಾ ಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದನ್ನು ವಿರೋಧಿಸಿ ಗುಲ್ಬರ್ಗದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಮಸ್ಕಿ ಒತ್ತಾಯಿಸಿದರು. ಕಾಂಗ್ರೆಸ್ಸಿನ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ಸದಸ್ಯರು ಮಸ್ಕಿ ಅವರ ಒತ್ತಾಯಕ್ಕೆ ಧ್ವನಿಗೂಡಿಸಿ ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆಚಾರ್ಯ ಅವರು, ‘ಹಿಂದೆ ಹಲವು ಬಾರಿ ಕೇಂದ್ರಕ್ಕೆ ಈ ಸಂಬಂಧ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿಯೂ ಒತ್ತಡ ಹೇರುವುದನ್ನು ಮುಂದುವರಿಸಲಾಗುವುದು’ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.