ADVERTISEMENT

`ಕೇಂದ್ರ, ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳು'

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2012, 20:09 IST
Last Updated 11 ಡಿಸೆಂಬರ್ 2012, 20:09 IST
ರಾಜ್ಯ ಮತ್ತು ಕೇಂದ್ರ ಸರ್ಕಾರ ದುರಾಡಳಿತ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ನಗರದ ಸಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾವೇಶದಲ್ಲಿ ಸಿಪಿಎಂ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮಾತನಾಡಿದರು			          -ಪ್ರಜಾವಾಣಿ ಚಿತ್ರ
ರಾಜ್ಯ ಮತ್ತು ಕೇಂದ್ರ ಸರ್ಕಾರ ದುರಾಡಳಿತ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ನಗರದ ಸಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾವೇಶದಲ್ಲಿ ಸಿಪಿಎಂ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮಾತನಾಡಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: `ದುರಾಡಳಿತದಲ್ಲಿ ಕೇಂದ್ರದ ಯುಪಿಎ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ' ಎಂದು ಸಿಪಿಎಂ ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ವಾಗ್ದಾಳಿ ನಡೆಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ದುರಾಡಳಿತ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ನಗರದ ಸಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`2ಜಿ ತರಗಾಂತರ ಹಂಚಿಕೆ, ಕಾಮನ್‌ವೆಲ್ತ್ ಕ್ರೀಡಾಕೂಟದ ಹಗರಣ, ಕಲ್ಲಿದ್ದಲು ಗಣಿ ಹಂಚಿಕೆ, ಆದರ್ಶ ಹೌಸಿಂಗ್ ಸೊಸೈಟಿ, ಐಪಿಎಲ್ ಕ್ರಿಕೆಟ್ ಸೇರಿದಂತೆ ಹಲವು ಹಗರಣಗಳಲ್ಲಿ ಕೇಂದ್ರದ ಸಚಿವರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಹಣ ಕೊಳ್ಳೆ ಹೊಡೆದಿದ್ದಾರೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರೂ ಹೊರತಾಗಿಲ್ಲ. ಗಣಿಗಾರಿಕೆ, ಡಿನೋಟಿಫಿಕೇಶನ್, ಭೂ ಹಗರಣದಲ್ಲಿ ಅವರು ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ತಂದಿರುವ ನವ ಉದಾರೀಕರಣ ಆರ್ಥಿಕ ವ್ಯವಸ್ಥೆ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಜನಪರ ಕಾಳಜಿ ಇಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ.

ಗ್ಯಾಸ್ ಸಿಲಿಂಡರ್ ಮಿತಿಯನ್ನು ಕಡಿತಗೊಳಿಸಲಾಗಿದೆ. ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಸರ್ಕಾರದ ಈ ಜನ ವಿರೋಧಿ ಧೋರಣೆಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳೊಂದಿಗೆ ಫೆಬ್ರುವರಿ 20 ಮತ್ತು 21ರಂದು ದೇಶವ್ಯಾಪಿ ಹೋರಾಡಲು ನಿರ್ಧರಿಸಿದ್ದೇವೆ ಎಂದರು.

ಇತ್ತೀಚೆಗೆ ಸರ್ಕಾರ ಪಡಿತರ ವ್ಯವಸ್ಥೆಯಲ್ಲಿ ಆಹಾರ ಸಾಮಗ್ರಿಗಳನ್ನು ನೀಡುವ ಬದಲು ಕುಟುಂಬ ಸದಸ್ಯರಿಗೆ ಹಣ ನೀಡಲು ಮುಂದಾಗಿದೆ. ಆದರೆ, ಈ ವ್ಯವಸ್ಥೆ ಕೂಡ ಪರೋಕ್ಷವಾಗಿ ಖಾಸಗಿಯವರಿಗೆ ಅನುಕೂಲ ಮಾಡಿಕೊಡುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ. ಹನ್ನೊಂದು ತಿಂಗಳಲ್ಲಿ 54 ಕೋಮುಗಲಭೆ ಪ್ರಕರಣಗಳು ನಡೆದಿರುವುದು ಇದಕ್ಕೆ ಸಾಕ್ಷಿ.

ದೇಶದಲ್ಲಿ ಪರ್ಯಾಯ ರಾಜಕಾರಣದ ಅಗತ್ಯವಿದ್ದು, ಜಾತ್ಯತೀತ ಪಕ್ಷಗಳು ಅಧಿಕಾರಕ್ಕೆ ಬರಬೇಕು. ಸರ್ಕಾರದ ಪ್ರಸ್ತುತ ನೀತಿಗಳಿಗೆ ವಿರುದ್ಧವಾದ ನೀತಿಗಳು ಜಾರಿಯಾಗಬೇಕು ಎಂದು ಕಾರಟ್ ಅಭಿಪ್ರಾಯಪಟ್ಟರು. ನಂತರ ಮಾತನಾಡಿದ ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಶ್ರೀರಾಮರೆಡ್ಡಿ, `ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಾಗ ತಮ್ಮದು ಭಿನ್ನ ಸರ್ಕಾರವೆಂದು ಘೋಷಿಸಿದ್ದರು. ಆದರೆ, ಈಗ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಗುರುತಿಸಿಕೊಂಡಿದೆ. ಮುಖ್ಯಮಂತ್ರಿಯೂ ಸೇರಿದಂತೆ ಸಚಿವರು, ಶಾಸಕರು ಸೆರೆವಾಸ ಅನುಭವಿಸಿದ್ದಾರೆ. ಇನ್ನೂ 16 ಸಚಿವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ' ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 20 ದಿನಗಳಲ್ಲೇ, ಹಾವೇರಿಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ರೈತರು ಬಲಿಯಾದರು. ಈಗ ಯಡಿಯೂರಪ್ಪ ಅವರು ಕೆಜೆಪಿ ಎಂಬ ಹೊಸ ಪಕ್ಷದ ಹೆಸರಿನಲ್ಲಿ ಅದೇ ಹಾವೇರಿಯಲ್ಲಿ ಸಮಾವೇಶ ನಡೆಸಿರುವುದು ನಾಚಿಕೆಗೇಡು  ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.