ADVERTISEMENT

ಕೊಲೆ ಪ್ರಕರಣ ಹೆಚ್ಚಳ: ರಾಜ್ಯಪಾಲರ ಕಳವಳ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2012, 19:30 IST
Last Updated 13 ಆಗಸ್ಟ್ 2012, 19:30 IST

ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಹಾಗೂ ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದರು.

ವ್ಯಂಗ್ಯ ಚಿತ್ರಕಾರರ ಸಮ್ಮೇಳನ ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದಿರುವುದನ್ನು ಗಮನಿಸಿದ್ದೇನೆ. ತೀವ್ರಗತಿಯಲ್ಲಿ ಬೆಳೆಯುತ್ತಿರುವ ಮಹಾನಗರಕ್ಕೆ ತ್ಯಾಜ್ಯ ವಿಲೇವಾರಿಯ ಅಸಮರ್ಪಕ ನಿರ್ವಹಣೆ ಶೋಭೆ ತರುವಂತಹುದು ಅಲ್ಲ~ ಎಂದು ಅಭಿಪ್ರಾಯಪಟ್ಟರು.

`ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳು ಇದ್ದರೂ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಕಳವಳಕಾರಿ. ಈಗ ಜವಾಬ್ದಾರಿ ವಹಿಸಿಕೊಳ್ಳುವವರು ಇಲ್ಲದಂತಾಗಿದೆ. ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಕೊಲೆ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು~ ಎಂದು ಅವರು ಸೂಚಿಸಿದರು.

`ರಾಜ್ಯದ ಲೋಕಾಯುಕ್ತ ಸಂಸ್ಥೆ ದೇಶದಲ್ಲಿನ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದು. ಸಂಸ್ಥೆಯ ಕಾರ್ಯನಿರ್ವಹಣೆಯ ಶೈಲಿಯಿಂದಲೇ ದೇಶದ ಗಮನ ಸೆಳೆದಿತ್ತು. ಕಳೆದ ವಾರ ಮುಖ್ಯಮಂತ್ರಿ ಅವರನ್ನು ಕರೆಸಿ ಲೋಕಾಯುಕ್ತರ ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಲೋಕಾಯುಕ್ತರಾಗಲು ಅರ್ಹರಿರುವ ವ್ಯಕ್ತಿಗಳು ಇದ್ದಾರೆ. ಅವರನ್ನು ಗುರುತಿಸಿ ಸರ್ಕಾರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.