ADVERTISEMENT

ಕೊಳೆಗೇರಿಗಳಲ್ಲಿ ಮೂಲ ಸೌಕರ್ಯಕ್ಕೆ ಯೋಜನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 19:50 IST
Last Updated 22 ಫೆಬ್ರುವರಿ 2011, 19:50 IST
ಕೊಳೆಗೇರಿಗಳಲ್ಲಿ ಮೂಲ ಸೌಕರ್ಯಕ್ಕೆ ಯೋಜನೆ
ಕೊಳೆಗೇರಿಗಳಲ್ಲಿ ಮೂಲ ಸೌಕರ್ಯಕ್ಕೆ ಯೋಜನೆ   

ಬೆಂಗಳೂರು: ‘ರಾಜ್ಯದಲ್ಲಿರುವ ಕೊಳೆಗೇರಿಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಲಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ 300 ಕೋಟಿ ರೂಪಾಯಿ ಅನುದಾನ ನಿರೀಕ್ಷಿಸಲಾಗಿದೆ’ ಎಂದು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಹೇಳಿದರು.

ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯು (ಕೆಕೆಎನ್‌ಎಸ್‌ಎಸ್) ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದ ಅಡಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ ಸಾಕಷ್ಟು ಸೌಲಭ್ಯ ಕಲ್ಪಿಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿ ಗುಣಮಟ್ಟದ ವಾಸಯೋಗ್ಯ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಗುತ್ತಿದೆ’ ಎಂದರು.

‘ಕೊಳೆಗೇರಿಗಳಲ್ಲಿ ಹೊಸ ಮನೆಗಳನ್ನು ನಿರ್ಮಿಸಿ ವಿತರಿಸಲು ಅವಕಾಶವಿದೆ. ಆದರೆ ಹಳೆಯ ಮನೆಗಳ ದುರಸ್ತಿಗೆ ಯಾವುದೇ ಅನುದಾನವಿಲ್ಲ. ಹಾಗಾಗಿ ರಾಜ್ಯದಲ್ಲಿರುವ ಎಲ್ಲ ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ 300 ಕೋಟಿ ರೂಪಾಯಿ ಅನುದಾನ ನೀಡುವ ವಿಶ್ವಾಸವಿದೆ’ ಎಂದು ಹೇಳಿದರು.

ಶಾಸಕ ದಿನೇಶ್‌ಗುಂಡೂರಾವ್ ಮಾತನಾಡಿ, ‘ಕೊಳೆಗೇರಿ ನಿವಾಸಿಗಳು ಸೌಲಭ್ಯದಿಂದ ವಂಚಿತರಾಗಿದ್ದು, ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ಜನರು ನೆಮ್ಮದಿಯ ಜೀವನ ನಡೆಸಲು ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಈಗಾಗಲೇ ಇರುವ ಕೊಳೆಗೇರಿಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಸಂಘಟನೆಯು ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೊಳೆಗೇರಿ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಬಜೆಟ್‌ನಲ್ಲಿಯೇ ವಿಶೇಷ ಅನುದಾನ ಮೀಸಲಿಡಬೇಕು. ಈ ಅನುದಾನದ ಸಮರ್ಪಕ ಬಳಕೆಗೆ  ಕ್ರಮ ಕೈಗೊಳ್ಳಬೇಕು’ ಎಂದರು.

ಶಾಸಕ ಡಾ.ಡಿ. ಹೇಮಚಂದ್ರಸಾಗರ್ ಮಾತನಾಡಿ, ‘ನಗರಗಳಲ್ಲಿರುವ ಕೊಳೆಗೇರಿಗಳನ್ನು ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಬಿಜೆಪಿ ಸರ್ಕಾರ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡಿದೆ’ ಎಂದು ಹೇಳಿದರು.

ರಾಜ್ಯದಲ್ಲಿ ಕೊಳೆಗೇರಿಗಳ ಭೂಮಿಯ ಮಾಲೀಕತ್ವಕ್ಕೆ ಸಂಬಂಧಪಟ್ಟ ಮೊಕದ್ದಮೆಗಳನ್ನು ವರ್ಷದೊಳಗೆ ಇತ್ಯರ್ಥಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ರಾಷ್ಟ್ರೀಯ ಕಾನೂನು ನೀತಿಯಡಿ ರಾಜ್ಯ ಕಾನೂನು ನೀತಿ ರೂಪಿಸಬೇಕು. ಕೊಳೆಗೇರಿ ನಿವಾಸಿಗಳಿಗೆ ಕ್ರಯ ಪತ್ರ ವಿತರಿಸಬೇಕು. ನಗರ ಬಡವರ ಅಭಿವೃದ್ಧಿ ಸಚಿವಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು.

ಶಾಸಕ ನೆ.ಲ.ನರೇಂದ್ರಬಾಬು, ಸಂಘಟನೆಯ ಸಂಸ್ಥಾಪಕರಾದ ರೂತ್ ಮನೋರಮಾ, ಕಾರ್ಯದರ್ಶಿ ಅನಿತಾ ರೆಡ್ಡಿ, ಉಪಾಧ್ಯಕ್ಷ ಜಿ.ಅಂಕಯ್ಯ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಎನ್.ಪಿ. ಸಾಮಿ, ಬಿಬಿಎಂಪಿ ಸದಸ್ಯ ಉದಯಶಂಕರ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.