ADVERTISEMENT

ಗಡಿ ವಿವಾದದಲ್ಲಿ ಶಿವಾಜಿ ಹೆಸರೇಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2013, 19:08 IST
Last Updated 19 ಫೆಬ್ರುವರಿ 2013, 19:08 IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನ ಕಾರ್ಯಕ್ರಮದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು, ಶಾಸಕ ಡಿ.ಹೇಮಚಂದ್ರ ಸಾಗರ್, ಗೋಸಾಯಿ ಮಠದ ಸುರೇಶ್ವರಾನಂದ ಸ್ವಾಮೀಜಿ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಅವರು ಶಿವಾಜಿ ಭಾವ     ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು                                                              -ಪ್ರಜಾವಾಣಿ ಚಿತ್ರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನ ಕಾರ್ಯಕ್ರಮದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು, ಶಾಸಕ ಡಿ.ಹೇಮಚಂದ್ರ ಸಾಗರ್, ಗೋಸಾಯಿ ಮಠದ ಸುರೇಶ್ವರಾನಂದ ಸ್ವಾಮೀಜಿ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಅವರು ಶಿವಾಜಿ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು:  `ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಸಲ್ಲ' ಎಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ದೇಶದ ಐಕ್ಯತೆಗೆ ಶ್ರಮಿಸಿದ ಮಹಾನ್ ನಾಯಕ ಶಿವಾಜಿ. ಅವರನ್ನು ಕೇವಲ ಮರಾಠಾ ಸಮುದಾಯ ಇಲ್ಲವೆ ಮಹಾರಾಷ್ಟ್ರ ಪ್ರದೇಶಕ್ಕೆ ಸೀಮಿತಗೊಳಿಸಿದರೆ ಅದು ಅವರಿಗೆ ಮಾಡಿದ ಅವಮಾನ' ಎಂದು ಪ್ರತಿಪಾದಿಸಿದರು.

`ಕರ್ನಾಟಕವನ್ನು ಶಿವಾಜಿ ಎಂದಿಗೂ ಬೇರೆಯಾಗಿ ನೋಡಿರಲಿಲ್ಲ. ಸಂಕುಚಿತ ಮನೋಭಾವದ ನಾಯಕರು ತಮ್ಮ ಸ್ವಾರ್ಥ ಸಾಧನೆಗಾಗಿ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

`ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದನ್ನು ಬಹುತೇಕ ಮುಖಂಡರು ಒಪ್ಪಿಕೊಂಡಿದ್ದಾರೆ. ಅದನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಎರಡೂ ರಾಜ್ಯಗಳಲ್ಲಿ ಕನ್ನಡಿಗರು ಮತ್ತು ಮರಾಠಿಗರು ಸೌಹಾರ್ದದಿಂದ ಬಾಳಲು ಅವಕಾಶ ಮಾಡಿಕೊಡಬೇಕು' ಎಂದು ಹೇಳಿದರು.

ಹಿರಿಯ ಪತ್ರಕರ್ತ ಬಾಬು ಕೃಷ್ಣಮೂರ್ತಿ, ಶಿವಾಜಿ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ಗೋಸಾಯಿ ಮಠದ ಸುರೇಶ್ವರಾನಂದ  ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.   ಶಾಸಕ ಡಿ. ಹೇಮಚಂದ್ರ ಸಾಗರ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜು, ಆಯುಕ್ತ ಕೆ.ಆರ್. ರಾಮಕೃಷ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.