ADVERTISEMENT

ಗಣೇಶ ಹಬ್ಬ: ನಗರದೆಲ್ಲೆಡೆ ಬಿಗಿ ಬಂದೋಬಸ್ತ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:55 IST
Last Updated 5 ಸೆಪ್ಟೆಂಬರ್ 2013, 19:55 IST

ಬೆಂಗಳೂರು: `ಗಣೇಶ ಹಬ್ಬದ ಅಂಗವಾಗಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ' ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಶಾಂತಿ ಸುವ್ಯವಸ್ಥೆಗೆ ಭಂಗ ತರುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗಣೇಶ ಮೂರ್ತಿಯ ಮೆರವಣಿಗೆ ಮತ್ತು ವಿಸರ್ಜನೆ ಕಾರ್ಯಕ್ರಮವನ್ನು ಸಿಬ್ಬಂದಿ ಚಿತ್ರೀಕರಿಸಲಿದ್ದಾರೆ. ಹಬ್ಬದ ಪ್ರಯುಕ್ತ ಸಾರ್ವಜನಿಕರಿಂದ ಬಲವಂತವಾಗಿ ಚಂದಾ ವಸೂಲಿ ಮಾಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸಿಬ್ಬಂದಿಗೆ  ಸೂಚಿಸಲಾಗಿದೆ. ಚಂದಾ   ನೀಡುವಂತೆ ಪೀಡಿಸುವ ವ್ಯಕ್ತಿ ಗಳ ಬಗ್ಗೆ ಸಾರ್ವಜನಿಕರು  ಸ್ಥಳೀಯ ಪೊಲೀಸರಿಗೆ  ಮಾಹಿತಿ ನೀಡಬಹುದು  ಎಂದು ಹೇಳಿದ್ದಾರೆ.

ಗಣೇಶ ಮೂರ್ತಿಗಳ  ಮೆರವಣಿಗೆ ಸಾಗುವ ಸ್ಥಳಗ ಳಲ್ಲಿ ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಸಂಘಟಕರು ಪಾಲಿಸಬೇಕು. ಮೆರವಣಿಗೆ ವೇಳೆ ಯಾವುದೇ ಅನಾಹುತಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಸ್ತೆಯ ಒಂದು ಬದಿಯಲ್ಲಿ ಮಾತ್ರ ಮೆರವಣಿಗೆಗೆ ಸ್ಥಳಾವಕಾಶ ನೀಡಲಾಗುತ್ತದೆ. ಗಲ್ಲಿಗಳಲ್ಲಿ ಮೆರವಣಿಗೆ ಮಾಡುವಂತಿಲ್ಲ. ಗಣೇಶ ಹಬ್ಬದ ಆಚರಣೆಗೆ ಯಾವುದೇ ಅಡ್ಡಿ ಆತಂಕವಿಲ್ಲ. ಯಾವುದೇ ಗಾಳಿ ಸುದ್ದಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಔರಾದಕರ್ ಮನವಿ ಮಾಡಿದ್ದಾರೆ.

ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಕಡ್ಡಾಯವಾಗಿ ಸಿ.ಸಿ ಟಿ.ವಿ ಕ್ಯಾಮೆರಾ ಮತ್ತು ಅಗ್ನಿನಂದಕ ಸಲಕರಣೆಗಳನ್ನು ಅಳವಡಿಸಬೇಕು. ವಿದ್ಯುತ್ ದೀಪಾಲಂಕಾರ ಮಾಡಲು ಬೆಸ್ಕಾಂನಿಂದ ಅನುಮತಿ ಪಡೆಯಬೇಕು. ಪೆಂಡಾಲ್‌ನ ಒಳಗಡೆ ಬ್ಯಾರಿಕೇಡ್‌ಗಳನ್ನು ಹಾಕಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನಕ್ಕೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ರಾತ್ರಿ ಹತ್ತು ಗಂಟೆಯ ನಂತರ ಮತ್ತು ಬೆಳಿಗ್ಗೆ ಆರು ಗಂಟೆಗೂ ಮುಂಚೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ರಾತ್ರಿ ಹತ್ತು ಗಂಟೆ ನಂತರ ಧ್ವನಿವರ್ಧಕಗಳನ್ನು ಬಳಸುವ ಮೂಲಕ ನೆರೆಹೊರೆಯವರಿಗೆ ತೊಂದರೆ ಉಂಟು ಮಾಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಠಾಣೆಗಳ ಸಿಬ್ಬಂದಿ ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅನುಮತಿ ಪಡೆಯಬೇಕು
ರಸ್ತೆಯ ಮಧ್ಯ ಭಾಗದಲ್ಲಿ ಮತ್ತು ವಿವಾದಿತ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ್ ಹಾಕುವವರು ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಗಳಿಂದ ಹಾಗೂ ಠಾಣೆಯಿಂದ ಪೂರ್ವಾನುಮತಿ ಪಡೆಯಬೇಕು. ಅಲ್ಲದೇ ಅವರು ಸಾಧ್ಯವಾದಷ್ಟು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ಸ್ಥಳದಲ್ಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆ ಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ಸಹಕರಿಸಬೇಕು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.