ADVERTISEMENT

ಗುತ್ತಿಗೆ ಆಧಾರದ ಮೇಲೆ ಆರು ನಿವೃತ್ತ ಅಧಿಕಾರಿಗಳ ನೇಮಕ?

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ಬೆಂಗಳೂರು: ಐವರು ನಿವೃತ್ತ ಕೆಎಎಸ್ ಅಧಿಕಾರಿ ಮತ್ತು ನಿವೃತ್ತ ರಾಜ್ಯ ಚುನಾವಣಾ ಆಯುಕ್ತ ಎಂ.ಆರ್.ಹೆಗಡೆ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಪ್ರಸ್ತಾವ ಮಂಡನೆಯಾಗಲಿದೆ.

ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯಲ್ಲಿರುವ ಡಾ.ಎ.ವಿ.ಪ್ರಸನ್ನ ಅವರನ್ನು ಗುತ್ತಿಗೆ ಆಧಾರದ ಮೇಲೆ ಅದೇ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ವಿ.ಧನಂಜಯಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿ ಮೆಂಡೋನ್ಸಾ ಆ್ಯಂಟನಿ ಅವರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವವಿದೆ.

ಎಸ್.ಎಫ್.ಯೋಗಪ್ಪನವರ್ ಅವರನ್ನು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಅವರ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಗೆ, ಎಚ್.ಎಂ.ಕೆಂಪೇಗೌಡ ಅವರನ್ನು ಗೃಹ ಸಚಿವ ಆರ್.ಅಶೋಕ ಅವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ಮತ್ತು ಜಿ.ಬಿ.ಹಿರೇಮಣಿಯವರ್ ಅವರನ್ನು ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅವರ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

ರಾಜ್ಯಪಾಲರ ಕಾನೂನು ಸಲಹೆಗಾರರ ಹುದ್ದೆಯನ್ನು ಸೃಷ್ಟಿಸಿದ್ದು, ರಾಜ್ಯ ಚುನಾವಣಾ ಆಯೋಗದ ನಿವೃತ್ತ ಚುನಾವಣಾ ಆಯುಕ್ತ ಎಂ.ಆರ್.ಹೆಗಡೆ ಅವರನ್ನು ಈ ಹುದ್ದೆಗೆ ನೇಮಕ ಮಾಡಲು ಪ್ರಸ್ತಾವ ಸಿದ್ಧಪಡಿಸಿದ್ದು, ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಐದು ಎಕರೆ ಭೂಮಿ: ಕಾಡುಗಳ್ಳ ವೀರಪ್ಪನ್‌ನಿಂದ ಹತರಾದ ಮಾಜಿ ಸಚಿವ ನಾಗಪ್ಪ ಅವರ ಪತ್ನಿ ಪರಿಮಳಾ ನಾಗಪ್ಪ ಅವರಿಗೆ ನಗರದ ಕುಂಬಳಗೋಡು ಗ್ರಾಮದ ಸರ್ವೆ ನಂಬರ್ 98ರಲ್ಲಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವವೂ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.