ADVERTISEMENT

ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಮೂಡಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ಹೊಸಕೋಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ ಎಂದು ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸಕೋಟೆಯಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದರೂ ಹೊಸ ಆವಿಷ್ಕಾರ, ಸಂಶೋಧನೆಗಳನ್ನು ಕಂಡುಹಿಡಿಯುವಲ್ಲಿ ಯುವ ವಿಜ್ಞಾನಿಗಳ ಅಗತ್ಯವಿದೆ. ಆದರೆ ವಿದ್ಯಾರ್ಥಿಗಳು ಐಟಿ, ಬಿಟಿ ಕಡೆ ಒಲವು ತೋರುತ್ತಿದ್ದು ವಿಜ್ಞಾನ ಶಿಕ್ಷಣ ಓದುತ್ತಿರುವ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವುದಲ್ಲದೆ ವಿಜ್ಞಾನವನ್ನು ಬೋಧಿಸಲು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ಎದುರಿಸುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದರು.
 
ದೇಶದ ಭವಿಷ್ಯದ ದೃಷ್ಠಿಯಿಂದ ವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ ಅಲ್ಲದೆ ಈ ಬಗ್ಗೆ ಜಾಗೃತಿ ಶಿಬಿರಗಳನ್ನು ನಡೆಸಬೇಕಿದೆ ಎಂದು ಅವರು ಹೇಳಿದರು.

ವಿಜ್ಞಾನಿ ಡಾ.ಜಿ.ಟಿ.ಚಂದ್ರಪ್ಪ ಮಾತನಾಡಿ ದೇಶದಲ್ಲಿ ವಿಜ್ಞಾನಿಗಳಿಗೆ ಸಾಕಷ್ಟು ಭವಿಷ್ಯ, ಅವಕಾಶಗಳಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯ್ತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಮಾಜಿ ಸದಸ್ಯ ಬಿ.ಎಂ.ನಾರಾಯಣಸ್ವಾಮಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ ಸ್ವಾಗತಿಸಿದರು.

ಉಪನಿರ್ದೇಶಕ ಎಚ್.ವಿ.ವೆಂಕಟೇಶಪ್ಪ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಸವಿತಾ, ವೆಂಕಟಲಕ್ಷ್ಮಮ್ಮ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ದೊಡ್ಡಬಳ್ಳಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ತಿಮ್ಮಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ವಿತರಣೆ, ವಿಜ್ಞಾನದ ಬಗ್ಗೆ ಆಸಕ್ತಿ ಮೂಢಿ ಸುವಲ್ಲಿ ಅಗಸ್ತ್ಯ ಫೌಂಡೇಷನ್ ತಂದಿರುವ ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ ಹಾಗು ಶಿಕ್ಷಕರಿಗೆ ಮಾಹಿತಿ ನೀಡುವಲ್ಲಿ ಇಲಾಖೆ ಹೊರತಂದಿರುವ `ಗರಿ~ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.