ಬೆಂಗಳೂರು: ಘೋಷಿತ ತಾಲ್ಲೂಕುಗಳ ರಚನೆ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಘೋಷಿತ ಹೊಸ ತಾಲ್ಲೂಕುಗಳ ರಚನಾ ಹೋರಾಟ ಸಮಿತಿ ಸದಸ್ಯರು ನಗರದ ಮಲ್ಲೇಶ್ವರದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.
ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸುವುದಾಗಿ 2013ರ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಅಲ್ಲದೇ ಪ್ರತಿ ತಾಲ್ಲೂಕಿಗೂ ₨ 2 ಕೋಟಿ ಅನುದಾನ ನೀಡುವುದಾಗಿ ಹೇಳಿತ್ತು. ಆದರೆ, ಈವರೆಗೂ ಹೊಸ ತಾಲ್ಲೂಕುಗಳು ರಚನೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
‘ಬಿಜೆಪಿ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹೊಸ ತಾಲ್ಲೂಕುಗಳ ರಚನೆಗೆ ತಡೆಯೊಡ್ಡಿದೆ. ರಾಜಕೀಯ ದುರುದ್ದೇಶದಿಂದ ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ್ ದೂರಿದರು.
‘ಶೀಘ್ರ ತಾಲ್ಲೂಕುಗಳ ರಚನೆ ಮಾಡಬೇಕು. ಇಲ್ಲದಿದ್ದರೆ ಮಾ.15 ರಿಂದ ಘೋಷಿತ ಪ್ರತಿ ತಾಲ್ಲೂಕಿನಲ್ಲೂ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸುತ್ತೇವೆ. ಲೋಕಸಭಾ ಚುನಾವಣೆಯ ನಂತರ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಪ್ರಧಾನ ಕಾರ್ಯದರ್ಶಿ ಬಾರಕೂರು ಸತೀಶ ಪೂಜಾರಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.