ADVERTISEMENT

ಚುನಾವಣೆ: ಇಂದಿನಿಂದ 8 ದಿನ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 20:00 IST
Last Updated 9 ಏಪ್ರಿಲ್ 2013, 20:00 IST

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿರುವ ನಗರ ವ್ಯಾಪ್ತಿಯ ಚುನಾವಣಾಧಿಕಾರಿಗಳ ಕಚೇರಿ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರದಿಂದ (ಏ.10) ಎಂಟು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಆದೇಶ ಹೊರಡಿಸಿದ್ದಾರೆ.

ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಹತ್ತು ಗಂಟೆಯಿಂದ ಏ.17ರ ಸಂಜೆ ಆರು ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಗಳ ಕಚೇರಿಯ ಸುತ್ತಮುತ್ತ ಪ್ರತಿಭಟನೆ, ಮೆರವಣಿಗೆ, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಔರಾದಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳ ಕಚೇರಿ ಬಳಿ ಐದಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪುಗೂಡುವಂತಿಲ್ಲ. ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಸ್ಫೋಟಕ ವಸ್ತುಗಳು ಹಾಗೂ ಮಾರಕಾಸ್ತ್ರಗಳನ್ನು ಹೊತ್ತೊಯ್ಯುವಂತಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.