ADVERTISEMENT

ಚುನಾವಣೆ: 135 ರೌಡಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 20:09 IST
Last Updated 7 ಏಪ್ರಿಲ್ 2013, 20:09 IST

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆಗ್ನೇಯ ವಿಭಾಗದ ಪೊಲೀಸರು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿನ ರೌಡಿಗಳ ಮನೆಗಳ ಮೇಲೆ ಭಾನುವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಮುನ್ನೆಚ್ಚರಿಕೆ ಕ್ರಮವಾಗಿ 135 ಕುಖ್ಯಾತ ರೌಡಿಗಳನ್ನು ಬಂಧಿಸಿದ್ದಾರೆ.

ಆಗ್ನೇಯ ವಿಭಾಗದ 13 ಠಾಣೆಗಳ ರೌಡಿ ಪಟ್ಟಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಎರಡು ತಾಸಿಗೂ ಹೆಚ್ಚು ಕಾಲ ತಪಾಸಣೆ ಮಾಡಿದರು. ಅಲ್ಲದೇ, ರೌಡಿಗಳ ಕಾರ್ಯ ಚಟುವಟಿಕೆಗಳು ಹಾಗೂ ಅವರ ಕುಟುಂಬ ಸದಸ್ಯರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದರು.

ಬಂಧಿತ ರೌಡಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪೊಲೀಸರು, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಕೆಲ ರೌಡಿಗಳಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಮನೆಗೆ ವಾಪಸ್ ಕಳುಹಿಸಿದರು.

`ಅಪರಾಧ ಕೃತ್ಯಗಳನ್ನು ಮುಂದುವರಿಸಿರುವ ರೌಡಿಗಳು ಹಾಗೂ ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿಕೊಂಡಿದ್ದ 19 ರೌಡಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು, ಆ ರೌಡಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು' ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ರೌಡಿಗಳನ್ನು ಬಂಧಿಸಿ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಯಿತು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.