ADVERTISEMENT

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2012, 22:00 IST
Last Updated 7 ಡಿಸೆಂಬರ್ 2012, 22:00 IST

ಬೆಂಗಳೂರು: ಚರ್ಚ್‌ಗಳು ಮತ್ತು ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಸಂದರ್ಭದಲ್ಲಿ ಕ್ರೈಸ್ತರ ಮೇಲೆ ಹೂಡಲಾದ ಮೊಕದ್ದಮೆಗಳನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಪುರಭವನದ ಎದುರು ಶುಕ್ರವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚ್‌ಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಅಲ್ಲದೇ, ರಾಜ್ಯ ಬಜೆಟ್‌ನಲ್ಲಿ ಕ್ರೈಸ್ತರಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಸರ್ಕಾರ ಈವರೆಗೂ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ಮಾಡಿದರೂ, ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಸರ್ಕಾರ ಶೀಘ್ರವೇ ಕ್ರೈಸ್ತರ ಅಭಿವೃದ್ಧಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಥವಾ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, `ಕ್ರೈಸ್ತ ಸಮುದಾಯದ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಚರ್ಚೆಗೆ ತಂದು, ಶೀಘ್ರವೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸುತ್ತೇನೆ' ಎಂದು ಭರವಸೆ ನೀಡಿದರು.

ನಂತರ ಮಾತನಾಡಿದ ಮತೀಯ ಕ್ರೈಸ್ತ ಅಲ್ಪಸಂಖ್ಯಾತರ ವರ್ಗಗಳ ನಗರ ವಿಭಾಗದ ಅಧ್ಯಕ್ಷ ಸಾಲೋಮನ್‌ರಾಜ್ `ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ದಾಳಿ ನಡೆದಾಗ ಪೊಲೀಸರು ಕ್ರೈಸ್ತ ಸಮುದಾಯದ ಮೇಲೆ ವಿನಾ ಕಾರಣ ಮೊಕದ್ದಮೆಗಳನ್ನು ದಾಖಲಿಸಿದ್ದಾರೆ. ಘಟನೆಗೆ ಕಾರಣರಾದ ಕಿಡಿಗೇಡಿಗಳು ಆರೋಪ ಮುಕ್ತರಾಗಿ ಮುಂದಿನ ಕೃತ್ಯಗಳಿಗೆ ಸಂಚು ರೂಪಿಸಿಕೊಳ್ಳುತ್ತಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕ್ರೈಸ್ತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು' ಎಂದು ಒತ್ತಾಯಿಸಿದರು.ಜೆಡಿಎಸ್‌ನ ನಗರ ಘಟಕದ ಅಧ್ಯಕ್ಷ ಎಂ.ಎಸ್. ನಾರಯಣರಾವ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.