ADVERTISEMENT

ಟಿಕೆಟ್ ಹಂಚಿಕೆ: ಮುಂದುವರಿದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2013, 19:52 IST
Last Updated 2 ಏಪ್ರಿಲ್ 2013, 19:52 IST

ಬೆಂಗಳೂರು: ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮಂಗಳವಾರವೂ ಮುಂದುವರಿದಿದ್ದು, `ಟಿಕೆಟ್ ಹಂಚಿಕೆಯಲ್ಲಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಇದರಿಂದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ' ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿನಿ ಗೌಡ, ಚಾಮರಾಜಪೇಟೆ ಕ್ಷೇತ್ರದಿಂದ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವಾ ಹಾಗೂ ಯಶವಂತಪುರ ಕ್ಷೇತ್ರದಿಂದ ಎಸ್.ಟಿ. ಸೋಮಶೇಖರ್ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆಗಳ ಮೂಲಕ ಒತ್ತಾಯಿಸಿದರು.

`ತೇಜಸ್ವಿನಿ ಅವರು ಸಂಸದರಾಗಿದ್ದಾಗ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕಾರ್ಯಕರ್ತರನ್ನು ನಿರ್ಲಕ್ಷಿಸಿದ್ದಾರೆ. ಇಂಥವರಿಗೆ ಟಿಕೆಟ್ ನೀಡಿದರೆ ನಾವೇ ಅವರನ್ನು ಸೋಲಿಸುತ್ತೇವೆ' ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವುದು ವರಿಷ್ಠರ ನಿರ್ಧಾರವಾದರೆ, ಸ್ಥಳೀಯರಾದ ಸುಷ್ಮಾ ರಾಜಗೋಪಾಲ ರೆಡ್ಡಿ ಅವರಿಗೇ ಟಿಕೆಟ್ ನೀಡಬೇಕು ಎಂದು ಆಗ್ರಘಿಹಿಸಿದರು.

ಪಕ್ಷದ ಸಂಘಟನೆಗಾಗಿ ನಿರಂತರ ಹೋರಾಟ ನಡೆಸಿರುವ ಎಂ.ಸಿ. ಕುಮಾರ್ ಅವರಿಗೆ ಚಾಮರಾಜಪೇಟೆ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು. ಕ್ಷೇತ್ರದ ಪರಿಚಯವೇ ಇಲ್ಲದ ನಾಯಕರಿಗೆ ಟಿಕೆಟ್ ನೀಡುವುದು ಸರಿಯಲ್ಲ ಎಂದು ಆಗ್ರಹಿಸಿದರು. ಯಶವಂತಪುರ ಕ್ಷೇತ್ರದಲ್ಲಿ ಕೆ.ಸಿ ಪ್ರಭಾಕರ ರೆಡ್ಡಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.