ADVERTISEMENT

ಟೋಲ್ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2012, 19:30 IST
Last Updated 13 ಫೆಬ್ರುವರಿ 2012, 19:30 IST

ದೇವನಹಳ್ಳಿ: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಬಿಐಎಎಲ್) ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಬಿಐಎಎಗೆ ಸೇವೆ ಒದಗಿಸುವ ಕಾರು ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘವು ಸೋಮವಾರ ಟೋಲ್‌ಗೇಟ್ ಬಳಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿತು.   

 ಪ್ರತಿಭಟನೆಯ ನೇತೃತ್ವ ವಹಿಸಿರುವ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘದ ಸಂಘದ ಅಧ್ಯಕ್ಷ ಷಣ್ಮುಖಪ್ಪ ಮಾತನಾಡಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಸುಮಾರು 9 ರಿಂದ 10 ಸಾವಿರ ವಾಹನಗಳು ಅನೇಕ ಬಾರಿ ಸಂಚರಿಸುತ್ತವೆ. ಪ್ರತಿ ಸಂಚಾರಕ್ಕೂ (ಟ್ರಿಪ್) 25 ರೂಪಾಯಿ ಸುಂಕ ನೀಡಬೇಕು. ಇದರಿಂದ ವಾಹನ ಮಾಲೀಕರಿಗೆ ತುಂಬಲಾರದ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಷಟ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣವಾಗಿಲ್ಲ. ಆದರೂ ಹಣ ವಸೂಲಿಗೆ ಮುಂದಾಗಿರುವುದು ಅನ್ಯಾಯ. ಈ ಸಂಬಂಧ ಈ ಹಿಂದೆ ಪ್ರತಿಭಟನೆ ನಡೆಸಿ, ವಿಮಾನ ನಿಲ್ದಾಣ ಸಂಪರ್ಕಿಸುವ ಕಾರು ಹಾಗೂ ಮ್ಯಾಕ್ಸಿ ಕ್ಯಾಬ್‌ಗಳಿಗೆ ಪರ್ಯಾಯ ರಸ್ತೆ ಅಭಿವೃದ್ಧಿಪಡಿಸಬೇಕು. ನಂತರ ಸುಂಕ ವಸೂಲಿ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರ ಇದನ್ನು ಗಣನೆಗೆ ತೆಗೆದುಕೊಳ್ಳದೆ ಸುಂಕ ವಸೂಲಿಗೆ ಮುಂದಾಗಿದೆ ಎಂದು ದೂರಿದರು.

ಕೋಲ್ಕತ್ತ, ಚೆನ್ನೈ, ಹೈದರಾಬಾದ್ ಸೇರಿದಂತೆ ದೇಶದ ಯಾವುದೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯಲ್ಲಿ ಸುಂಕ ವಸೂಲಿ ಪದ್ಧತಿ ಇಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳದೆ ತಪ್ಪು ಮಾಡಿದೆ. ಸುಂಕ ವಸೂಲಿಯ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಿಲ್ಲ. ಈ ಹಿನ್ನೆಲೆಯಲ್ಲಿ ಸುಂಕ ಸಂಗ್ರಹ ಕೈಬಿಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
 ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ 7ರ ಅಭಿವೃದ್ಧಿಗಾಗಿ 650 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.

ಆದರೆ, ಖಾಸಗಿ ಕಂಪೆನಿಯೊಂದರಿಂದ 125 ಕೋಟಿ ಪಡೆದು 21 ವರ್ಷಗಳ ಅವಧಿಗೆ ಸುಂಕ ವಸೂಲಿಯ ಗುತ್ತಿಗೆ ನೀಡಲಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೂ ಸುಂಕ ವಸೂಲಿ ಮಾಡಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನೀಲಕಂಠಪ್ಪ ಆರೋಪಿಸಿದರು. 

ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ಸುಂಕ ಸಂಗ್ರಹಿಸದಂತೆ ಆದೇಶಿಸಬೇಕು. ಈ ಬೇಡಿಕೆ ಈಡೇರುವವರೆಗೂ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಎಲ್ಲ ವಾಹನಗಳನ್ನೂ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

87 ಮಂದಿ ಬಂಧನ
ಬೆಳಿಗ್ಗೆ 7 ಗಂಟೆಗೆ ಪ್ರತಿಭಟನೆ ಆರಂಭವಾಯಿತು. ಮಧ್ಯಾಹ್ನ 1ರ ವೇಳೆಗೆ ಪ್ರತಿಭಟನೆಯ ತೀವ್ರತೆ ಹೆಚ್ಚುತ್ತಿದ್ದಂತೆಯೇ ಮೂರು ದಿನಗಳಿಂದ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಪೊಲೀಸರು ಅಧ್ಯಕ್ಷ ಷಣ್ಮುಖಪ್ಪ, ಉಪಾಧ್ಯಕ್ಷ ಸಿದ್ದಯ್ಯ, ಪ್ರಧಾನ ಕಾರ್ಯದರ್ಶಿ ನೀಲಕಂಠಪ್ಪ ಸೇರಿದಂತೆ ಒಟ್ಟು 87 ಮಂದಿಯನ್ನು ಬಂಧಿಸಿ, ಬೆಂಗಳೂರಿಗೆ ಕೊಂಡೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT