ಬೆಂಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರು ಮಾ.19ರೊಳಗೆ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಠಾಣೆಗಳ ವಶಕ್ಕೆ ಒಪ್ಪಿಸಬೇಕು ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಆದೇಶಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು, ಸಾರ್ವಜನಿಕ ಹಾಗೂ ಖಾಸಗಿ ವಲಯದ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳು, ಸೆಕ್ಯುರಿಟಿ ಏಜೆನ್ಸಿಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೆಜೆಟೆಡ್ (ಪತ್ರಾಂಕಿತ) ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಭದ್ರತೆಯ ಕಾರಣಕ್ಕಾಗಿ ಆದೇಶದಿಂದ ವಿನಾಯಿತಿ ಬಯಸುವ ವ್ಯಕ್ತಿಗಳು ಸಂಬಂಧಪಟ್ಟ ವಿಭಾಗದ ಡಿಸಿಪಿ ಅವರಿಗೆ ಮನವಿ ಸಲ್ಲಿಸಿ, ಅನುಮತಿ ಪಡೆದುಕೊಳ್ಳಬೇಕು. ನಿಗದಿತ ಗಡುವಿನೊಳಗೆ ಶಸ್ತ್ರಾಸ್ತ್ರಗಳನ್ನು ಠಾಣೆಯ ವಶಕ್ಕೆ ನೀಡದ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.