ADVERTISEMENT

ಡೆಂಗೆ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಜೂನ್ 2013, 19:59 IST
Last Updated 1 ಜೂನ್ 2013, 19:59 IST

ಬೆಂಗಳೂರು: ಡೆಂಗೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಕಾಡುಗೊಂಡನಹಳ್ಳಿಯಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಗೃಹ ಸಚಿವ ಕೆ.ಜೆ.ಜಾರ್ಜ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನೆ ಮನೆಗೆ ತೆರಳಿದ ಸಚಿವರು ಡೆಂಗೆ ಬಗ್ಗೆ ಹಾಗೂ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಬಿಬಿಎಂಪಿಯ ಪೂರ್ವ ವಲಯದ 44 ವಾರ್ಡ್‌ಗಳಲ್ಲಿ, ಪ್ರತಿ ವಾರ್ಡ್‌ಗೂ ಹಿರಿಯ ಆರೋಗ್ಯ ವೀಕ್ಷಕರ ಮೇಲ್ವಿಚಾರಣೆಯಲ್ಲಿ 5 ತಂಡಗಳಂತೆ ಒಟ್ಟು 220 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳ ಸದಸ್ಯರು ಮನೆ ಮನೆಗೂ ಭೇಟಿ ನೀಡಿ, ಡೆಂಗೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಸೊಳ್ಳೆ ಉತ್ಪತ್ತಿಯ ತಾಣಗಳನ್ನು ಗುರುತಿಸಿ ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಬಿಬಿಎಂಪಿಯ ಆರೋಗ್ಯ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.