ಬೆಂಗಳೂರು: `ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದರು.
ಘಟನೆಯ ಬಳಿಕ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಒತ್ತಡಗಳಿಗೆ ಮಣಿಯದೆ ತನಿಖೆ ನಡೆಸಲಾಗುತ್ತದೆ. ಆರೋಪಿಗಳು ಯಾರೇ ಆಗಿದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ವಕೀಲರೊಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಮಿರ್ಜಿ, `ಯಾವುದೇ ಸಾವು ಸಂಭವಿಸಿಲ್ಲ. ಡಿಸಿಪಿ ಮತ್ತು ಎಸಿಪಿ ಸೇರಿದಂತೆ ಸುಮಾರು 50 ಪೊಲೀಸರು ಗಾಯಗೊಂಡಿದ್ದಾರೆ. ಅಂತೆಯೇ ವಕೀಲರು, ಮಾಧ್ಯಮ ಪ್ರತಿನಿಧಿಗಳಿಗೂ ಗಾಯವಾಗಿದೆ~ ಎಂದು ತಿಳಿಸಿದರು.
ಗಾಯಾಳುಗಳಲ್ಲಿ ಕಾನ್‌ಸ್ಟೇಬಲ್ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ. ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳು ಹಾಗೂ ಛಾಯಾಚಿತ್ರ ಸೇರಿದಂತೆ ಯಾವುದೇ ದಾಖಲೆಗಳಿದ್ದರೂ ಪೊಲೀಸರಿಗೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.
ಮಾಜಿ ಸಚಿವ ಜನಾರ್ದನರೆಡ್ಡಿ ಅವರು ವಿಚಾರಣೆಗೆ ಬಂದಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಬಳಿ ಸಾಕಷ್ಟು ಭದ್ರತಾ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಈ ದುರ್ಘಟನೆ ನಡೆದಿದ್ದು ದುರದೃಷ್ಟಕರ. ಇದರಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವಿಲ್ಲ ಎಂದು ಸಮರ್ಥಿಸಿಕೊಂಡರು.
ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಟಿ.ಸುನಿಲ್ ಕುಮಾರ್, ಎಂ.ಸಿ.ನಾರಾಯಣಗೌಡ ಮತ್ತು ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.