ADVERTISEMENT

ತಾಕತ್‌ಸಿಂಗ್ ರಾಣಾವತ್ ರಾಮನಗರ ಡಿಎಫ್‌ಓ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 19:30 IST
Last Updated 24 ಫೆಬ್ರುವರಿ 2012, 19:30 IST

ರಾಮನಗರ: ಕನಕಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಕುರಿತು ಸಮಗ್ರ ತನಿಖೆ ನಡೆಸಲು ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯಲ್ಲಿ ಸದಸ್ಯರಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ) ತಾಕತ್ ಸಿಂಗ್ ರಾಣಾವತ್ ಅವರನ್ನು ರಾಮನಗರ ಜಿಲ್ಲೆಯ ಡಿಎಫ್‌ಒ ಆಗಿ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಗುರುವಾರವೇ ಅಧಿಕಾರ ಸ್ವೀಕರಿಸಿ ಕಾರ್ಯಾರಂಭ ಮಾಡಿದ್ದಾರೆ.

ಬೀದರ್ ಜಿಲ್ಲೆಯಿಂದ ವರ್ಗಾವಣೆಯಾಗಿ ಬಂದಿರುವ ತಾಕತ್‌ಸಿಂಗ್ ರಾಣಾವತ್ ಅವರು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ತನಿಖಾ ತಂಡದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಕನಕಪುರ ತಾಲ್ಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಅವರೇ ಈ `ಖಡಕ್~ ಅಧಿಕಾರಿಯನ್ನು ರಾಮನಗರಕ್ಕೆ ವರ್ಗ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅರಣ್ಯಾಧಿಕಾರಿಗಳ ಅಮಾನತು: ಕನಕಪುರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ಕರ್ತವ್ಯ ಲೋಪ ಮಾಡಿದ ಆರೋಪದ ಮೇಲೆ ಎ.ಸಿ.ಎಫ್ ಶ್ರೀನಿವಾಸ್ ಹಾಗೂ ವಲಯ ಅರಣ್ಯಾಧಿಕಾರಿ ನಾಗರಾಜ್ ಅವರನ್ನು ಅಮಾನತುಗೊಳಿಸಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಅಮಾನತು ಆದೇಶ ಹೊರಡಿಸಿದ್ದಾರೆ.

ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಅರಣ್ಯ ಸಚಿವ ಯೋಗೇಶ್ವರ್ ನಡುವಿನ ಮುಸುಕಿನ ಗುದ್ದಾಟದ ಕಾರಣ ಈ ಅಧಿಕಾರಿಗಳು ಅಮಾನತುಗೊಂಡಿದ್ದಾರೆ ಎಂಬ ಗುಸುಗುಸು ಜಿಲ್ಲೆಯಲ್ಲಿ ಹಬ್ಬಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.