ADVERTISEMENT

ತೆಲಂಗಾಣ ಮಾದರಿ ಹೋರಾಟ-ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2011, 19:30 IST
Last Updated 7 ಜೂನ್ 2011, 19:30 IST

ಬೆಂಗಳೂರು: `ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ಕೇಂದ್ರ ಸರ್ಕಾರ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ಮಾಡದೆ ತಾರತಮ್ಯ  ಮಾಡುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತೆಲಂಗಾಣ ಮಾದರಿ ಹೋರಾಟ ಮಾಡಲಾಗುವುದು~ ಎಂದು ಹೈದರಾಬಾದ್ ಕರ್ನಾಟಕ ಪ್ರದೇಶದ ಹೋರಾಟಗಳ ಸಮನ್ವಯ ಸಮಿತಿ ಕಾರ್ಯದರ್ಶಿ ಲಕ್ಷ್ಮಣ ದಸ್ತಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಸ್ಥಾನ ಮಾನ ನೀಡಲು ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಕಿಂಚಿತ್ತೂ ಕೂಡ ಗಮನ ನೀಡುತ್ತಿಲ್ಲ. ದೇಶದಲ್ಲಿ ಹತ್ತು ರಾಜ್ಯಗಳಿಗೆ 371 ನೇ ಕಲಂನಲ್ಲಿ ವಿಶೇಷ ಸ್ಥಾನಮಾನಕ್ಕೆ ಅವಕಾಶ ನೀಡಿದೆ. ಆದರೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ~ ಎಂದು ಆರೋಪಿಸಿದರು.

`ಕಳೆದ ವರ್ಷ ಮಾರ್ಚ್‌ನಲ್ಲಿ ಮುಖ್ಯಮಂತ್ರಿಗಳೊಂದಿಗೆ ನಿಯೋಗ ತೆರಳಿ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು. ಸಂವಿಧಾನ ತಿದ್ದುಪಡಿ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದ ಪ್ರಧಾನಿಗಳು ಈ ವರೆಗೂ ಭರವಸೆ ಈಡೇರಿಸಿಲ್ಲ~ ಎಂದು ದೂರಿದರು.

`ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ರಾಜ್ಯದ ಮಂತ್ರಿಗಳಾಗಲೀ, ಸಂಸದರಾಗಲೀ  ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ. ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯಿಲಿ ಅವರನ್ನು ಸಹ ಭೇಟಿಯಾಗಿ ಮನವಿ ಮಾಡಿದ್ದೆವು. ಅವರು ಕೂಡ ನಿರ್ಲಕ್ಷ್ಯ ಮಾಡಿದ್ದಾರೆ~ ಎಂದು ಹೇಳಿದರು.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಹೋರಾಟ: `ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿಗೆ ಮುಂದಾಗದಿದ್ದಲ್ಲಿ ಮುಖ್ಯಮಂತ್ರಿಗಳೇ ಹೋರಾಟದ ನೇತೃತ್ವ ವಹಿಸುದಾಗಿ ಹೇಳಿದ್ದಾರೆ. ಗುಲ್ಬರ್ಗದಲ್ಲಿ ಹೋರಾಟ ಪ್ರಾರಂಭಿಸಲಿದ್ದು, ಅಧಿವೇಶನದ ನಂತರ ಮುಖ್ಯಮಂತ್ರಿಗಳು ಹೋರಾಟಕ್ಕೆ ದಿನಾಂಕ ನಿಗದಿ ಮಾಡಲಿದ್ದಾರೆ. ಈ ಸಂಬಂಧ ಅವರನ್ನು ಭೇಟಿ ಮಾಡಿ ದಿನಾಂಕ ನಿಗದಿ ಮಾಡುವಂತೆ ಕೋರಲಿದ್ದೇವೆ. ಕೇಂದ್ರ ಸರ್ಕಾರ ಬೇಡಿಕೆಗೆ ಮಣಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ~ ಎಂದರು.

ಅಧ್ಯಕ್ಷರ ನೇಮಕ ಮಾಡಿ: `ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಳ ಪರಿಶೀಲನೆಗೆ ಸರ್ಕಾರ ನಂಜುಂಡಪ್ಪ ಅನುಷ್ಠಾನ ಸಮತಿ ರಚನೆ ಮಾಡಿದೆ. ನಂಜುಂಡಪ್ಪ ವರದಿಯ ಶಿಫಾರಸಿನಂತೆ ಸರ್ಕಾರ ಹಣ ಸಹ ಬಿಡುಗಡೆ ಮಾಡುತ್ತಿದೆ. ಸುಶೀಲ್ ನಮೋಶಿ ರಾಜೀನಾಮೆ ನೀಡಿದ ನಂತರ ಸಮಿತಿಯ ಅಧ್ಯಕ್ಷ ಸ್ಥಾನ ಕಳೆದ ಎಂಟು ತಿಂಗಳಿಂದ ಖಾಲಿಯಾಗಿದೆ. ಇದರಿಂದ ಬಿಡುಗಡೆಯಾದ ಶೇ 50 ಹಣ ಸರ್ಕಾರಕ್ಕೆ ವಾಪಸ್ ಆಗಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಹಿಂದುಳಿದಿವೆ. ಕೂಡಲೇ ಸರ್ಕಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಬೇಕು~ ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಕನ್ನಡ ಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜು ಸಿರಗಾಪೂರ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಗುಲ್ಬರ್ಗ ಅಧ್ಯಕ್ಷ ಕಲ್ಯಾಣರಾವ ಪಾಟೀಲ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.