ಬೆಂಗಳೂರು: ಅರಣ್ಯ ಇಲಾಖೆಯವರು ಹಲವೆಡೆ ರೈತರ ತೋಟಗಳನ್ನು ಪದೇ ಪದೇ ತೆರವುಗೊಳಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಬಂಧಪಟ್ಟ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು.
ಪಕ್ಷೇತರ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಚಿತ್ರದುರ್ಗ ಜಿಲ್ಲೆಯಲ್ಲಿ ತೆಂಗಿನ ತೋಟಗಳಿರುವ ಜಮೀನುಗಳ ಮಾಲೀಕರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ. ಅರಣ್ಯದ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ ಈ ರೀತಿ ಆಗಿದೆ ಎಂದರು.
ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಆದರೆ ಸಚಿವರ ಉತ್ತರದಿಂದ ತೃಪ್ತರಾಗದ ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ, `ನನ್ನ ಕ್ಷೇತ್ರದಲ್ಲೂ ಈ ಸಮಸ್ಯೆ ಇದೆ. 100 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೂ, ಸರ್ಕಾರ ಮಾಡಿದ ತಪ್ಪಿನಿಂದಾಗಿ ರೈತರು ಬೀದಿ ಪಾಲಾಗುವಂತಾಗಿದೆ. ರೈತರನ್ನು ಒಕ್ಕಲೆಬ್ಬಿಸದೆ ಇರಲು ನ್ಯಾಯಾಲಯವೂ ಸಮ್ಮತಿಸಿದೆ. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ಕೇಂದ್ರಕ್ಕೆ ನೀಡಿಲ್ಲ~ ಎಂದು ಆಕ್ರೋಶ ವ್ಯಕ್ತಪಡಿಸಿದರು. `ಅಧಿಕಾರಿಗಳು ಹೇಳಿದ ಹಾಗೆ ಕೇಳಬೇಡಿ, ಕಾಯ್ದೆಯಡಿ ಕೆಲಸ ಮಾಡಿ~ ಎಂದು ಸ್ಪೀಕರ್ ಸಚಿವರಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.