ADVERTISEMENT

ದಲಿತರಿಗೆ ಸಾಮಾಜಿಕ ಬಹಿಷ್ಕಾರ: ನಗರದಲ್ಲಿ ದಸಂಸ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 19:30 IST
Last Updated 14 ಅಕ್ಟೋಬರ್ 2011, 19:30 IST

ಬೆಂಗಳೂರು: ಧಾರವಾಡ ಜಿಲ್ಲೆ ನಾಯಕನೂರು ಗ್ರಾಮದಲ್ಲಿ ಮತ್ತು ಮಂಡ್ಯ ಜಿಲ್ಲೆಯ ಕಸುವನಹಳ್ಳಿಯಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ಸದಸ್ಯರು ನಗರದ ಪುರಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

`ಸ್ವಾತಂತ್ರ್ಯ ಬಂದು 64 ವರ್ಷಗಳೇ ಕಳೆದಿದ್ದರೂ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ದೌರ್ಜನ್ಯ ತಡೆಯುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಸರ್ಕಾರಗಳಿಗೆ ದಲಿತ ಪರ ಕಾಳಜಿಯೇ ಇಲ್ಲ~ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ತಮ್ಮಯ್ಯ ದೂರಿದರು.

ದಲಿತರ ಮೇಲೆ ಹಲ್ಲೆ ನಡೆಸಿ ಬಹಿಷ್ಕಾರ ಹಾಕಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವ ವಿಚಾರ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದೆ ದಲಿತರ ಹಿತರಕ್ಷಣೆಯನ್ನು ನಿರ್ಲಕ್ಷಿಸುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದಲೇ ದಲಿತರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಘಟನೆ ಸಂಬಂಧ ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಎದುರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕರಾದ ಎಚ್.ಮಾರಪ್ಪ, ಗುರುಲಿಂಗಯ್ಯ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.