ಬೆಂಗಳೂರು: ನಗರದ ದಾಸಪ್ಪ ಆಸ್ಪತ್ರೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ಮೇಯರ್ ಡಿ. ವೆಂಕಟೇಶಮೂರ್ತಿ ಮಂಗಳವಾರ ಇಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಕೇಂದ್ರ ಕಚೇರಿಯ ಹಿಂಭಾಗದಲ್ಲಿರುವ ಸಂಕೀರ್ಣದಲ್ಲಿ ಪಾಲಿಕೆ ಸದಸ್ಯರಿಗಾಗಿ ಹೆಲ್ತ್ ಕ್ಲಬ್ ಸ್ಥಾಪಿಸಲಾಗುವುದು ಎಂದು ಹೇಳಿದರು.
ನಗರದಲ್ಲಿ ಡೆಂಗೆ, ಚಿಕುನ್‌ಗುನ್ಯಾ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಪಾಲಿಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಸೊಳ್ಳೆ ಕಾಟ ಹೆಚ್ಚಿರುವಂತಹ ಪ್ರದೇಶಗಳಲ್ಲಿ ವಾರ್ಡ್‌ಗೆ ಮೂವರು ಸಿಬ್ಬಂದಿಗಳನ್ನು ನಿಯೋಜಿಸಿ ಔಷಧಿ ಸಿಂಪಡಿಸುವಂತೆ ಸೂಚಿಸಲಾಗಿದೆ. ಪಾಲಿಕೆಯ ಎಲ್ಲ ಆಸ್ಪತ್ರೆಗಳಲ್ಲಿ ಡೆಂಗೆ, ಚಿಕುನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ರೋಗಿಗಳಿಗೆ ಚಿಕಿತ್ಸೆ ನೀಡಲು ಔಷಧಿ ದಾಸ್ತಾನಿಡುವಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
`ನಗರದಲ್ಲಿ ಇದುವರೆಗೆ 45 ಮಂದಿಗೆ ಡೆಂಗೆ ಹಾಗೂ ಮೂವರಿಗೆ ಚಿಕುನ್‌ಗುನ್ಯಾ ರೋಗ ತಗುಲಿದೆ~ ಎಂದು ಅವರು ಮಾಹಿತಿ ನೀಡಿದರು.
`ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಅವರೊಂದಿಗೂ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ. ಪಾಲಿಕೆಗೆ ಆಗಮಿಸಿ ಆರೋಗ್ಯಾಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ~ ಮೇಯರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.