ADVERTISEMENT

ದೇವರಜೀವನಹಳ್ಳಿ: ಬಣ್ಣದ ರಾಸಾಯನಿಕ ಕಾರ್ಖಾನೆಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 20:17 IST
Last Updated 5 ಮಾರ್ಚ್ 2018, 20:17 IST
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ –ಪ್ರಜಾವಾಣಿ ಚಿತ್ರ
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ –ಪ್ರಜಾವಾಣಿ ಚಿತ್ರ   

ಬೆಂಗಳೂರು: ದೇವರಜೀವನಹಳ್ಳಿಯ ಸಕ್ಕರೆ ಮಂಡಿ ಬಳಿ ಸೋಮವಾರ ರಾತ್ರಿ ಬಣ್ಣದ ರಾಸಾಯನಿಕ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಬಣ್ಣದ ಸಾಮಗ್ರಿಗಳನ್ನು ಸಂಗ್ರಹಿಸಿಡ‌ಲಾಗಿತ್ತು. ಆಕಸ್ಮಿಕವಾಗಿ ಅವುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆಯು ಇಡೀ ಕಟ್ಟಡವನ್ನೇ ಆವರಿಸಿದೆ. ಕಟ್ಟಡದಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

‘ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಕಪಕ್ಕದ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿತ್ತು. ಸಂಜೆ 6 ಗಂಟೆ ಸುಮಾರಿಗೆ ಹೊತ್ತಿಕೊಂಡ ಬೆಂಕಿ ರಾತ್ರಿ 11.30ರ ವೇಳೆಗೆ ನಿಯಂತ್ರಣಕ್ಕೆ ಬಂದಿದೆ. 15 ಅಗ್ನಿಶಾಮಕ ವಾಹನಗಳಲ್ಲಿ ಬಂದು ಕಾರ್ಯಾಚರಣೆ ನಡೆಸಿದ್ದೇವೆ’ ಎಂದು ಹೇಳಿದರು.

ADVERTISEMENT

‘ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ದೇವರಜೀವನಹಳ್ಳಿ ಪೊಲೀಸರು ತಿಳಿಸಿದರು.

ಈ ಕಟ್ಟಡದಲ್ಲಿ ಪೀಠೋಪಕರಣಗಳನ್ನೂ ತಯಾರಿಸಲಾಗುತ್ತಿತ್ತು. ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡ ಕೂಡಲೇ ಅವರೆಲ್ಲರೂ ಹೊರಗೆ ಓಡಿ ಬಂದಿದ್ದಾರೆ. ಅಗ್ನಿ ಸುರಕ್ಷತಾ ಕ್ರಮಗಳನ್ನು ಕಟ್ಟಡದ ಮಾಲೀಕರು ಕೈಗೊಂಡಿರಲಿಲ್ಲ ಎಂದು ಸ್ಥಳೀಯ ನಿವಾಸಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.