ADVERTISEMENT

ದೇವಾಲಯದ ಮಾಹಿತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಬೆಂಗಳೂರು: ಉತ್ತರ ತಾಲ್ಲೂಕಿನ ಚಿಕ್ಕಜಾಲ ಹೋಬಳಿಯಲ್ಲಿನ ಉಣಚೂರು ಗ್ರಾಮದಲ್ಲಿ ಇರುವ ತಿರುಮಲ ದೇವಸ್ಥಾನ ಹಿಂದೆ ಯಾವ ರೀತಿ ಇತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಈ ದೇವಾಲಯದ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಆಗುತ್ತಿದೆ ಎಂದು ದೂರಿ ಅರ್ಚಕ ಎಚ್.ಆರ್.ರಘುನಾಥ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್‌ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಸರ್ವೆ ನಂ.98ರಲ್ಲಿ ಇರುವ ಈ ದೇವಾಲಯದಲ್ಲಿ ನಾರಾಯಣಸ್ವಾಮಿ ಹಾಗೂ ಇತರರು ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ. ವಿಚಾರಣೆ ಮುಂದೂಡಲಾಗಿದೆ.

 ಸರ್ಕಾರಕ್ಕೆ  ನೋಟಿಸ್
ರಾಜಕೀಯ ಪ್ರಭಾವ ಬಳಸಿಕೊಂಡು ಮಾರಸಂದ್ರ ಮುನಿಯಪ್ಪ ಅವರು ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದು ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಕೋರಿ  ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಜನರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರಿಗೆ ಮುನಿಯಪ್ಪನವರು ತೀವ್ರ ಹಿಂಸೆ ನೀಡುತ್ತಿದ್ದಾರೆ ಎಂದು ವೀರಣ್ಣ ಹಾಗೂ ಇತರರು ದೂರಿದ್ದಾರೆ.

ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್‌ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.

ತನಿಖೆ: ತಡೆ ವಿಸ್ತರಣೆ
ಚಿತ್ರನಟ ವಿನೋದ್ ಕುಮಾರ್ ಅವರ ಕೊಲೆ ಪ್ರಕರಣವನ್ನು ಮುಂದಿನ ತನಿಖೆಗೆ ಸಿಐಡಿಗೆ ಒಪ್ಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಒಂದು ವಾರದ ವರೆಗೆ ವಿಸ್ತರಿಸಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

  4ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ಅಂತಿಮ ಹಂತದಲ್ಲಿ ಇರುವಾಗಲೇ ಅದನ್ನು ಸಿಐಡಿಗೆ ಒಪ್ಪಿಸಲಾಗಿದ್ದು ಇದು ಸರಿಯಲ್ಲ ಎಂದು ದೂರಿ ವಿನೋದ್ ಅವರ ಸಹೋದರ ಎನ್.ಕಿರಣ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್.ಆನಂದ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.