ಬೆಂಗಳೂರು: `ರಾಜ್ಯದಲ್ಲಿ ಮೂರು ಲಕ್ಷಕ್ಕೂ ಅಧಿಕ ಮಂದಿ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದು, ಇಂತಹ ಪ್ರವೃತ್ತಿ ತಡೆಗೆ ನಕಲಿ ಜಾತಿ ಪ್ರಮಾಣಪತ್ರ ನೀಡುವ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡುವ ಕಾನೂನು ಜಾರಿಗೆ ತರಲಾಗುತ್ತಿದೆ~ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣ ಸ್ವಾಮಿ ತಿಳಿಸಿದರು.
ರಾಜ್ಯ ಎಸ್‌ಸಿ/ಎಸ್‌ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಎ.ಡಿ.ಎ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಕರ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, `ನಕಲಿ ಪ್ರಮಾಣಪತ್ರ ಪಡೆದವರ ಅಂಕಿ ಅಂಶ ಪಡೆಯಲಾಗುತ್ತಿದೆ. ಕಾನೂನಿಗೂ ತಿದ್ದುಪಡಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರಗಳು ಇಂತಹ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ~ ಎಂದು ಹೇಳಿದರು.
ರಾಜ್ಯ ಎಸ್‌ಸಿ/ಎಸ್‌ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಟಿ. ವೆಂಕಟೇಶಯ್ಯ ಮಾತನಾಡಿ, `ಅನುದಾನಿತ ಶಾಲೆಗಳಲ್ಲಿ ಎಸ್‌ಸಿ/ಎಸ್‌ಟಿ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ಶಾಲೆಯಿಂದ ಹೊರ ಹಾಕಲಾಗುತ್ತಿದೆ. ನ್ಯಾಯ ಕೇಳಲು ಹೋದಾಗ ಡಿಡಿಪಿಐಗಳು ರೌಡಿಗಳಂತೆ ವರ್ತಿಸುತ್ತಾರೆ~ ಎಂದು ದೂರಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಶಾಸಕ ವೀರಭದ್ರಪ್ಪ ಹಾಲಹರವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.