ADVERTISEMENT

ನಗರದಲ್ಲಿ ಕಟ್ಟೆಚ್ಚರ- ಬಸ್, ರೈಲು ನಿಲ್ದಾಣದಲ್ಲಿ ತಪಾಸಣೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2013, 19:59 IST
Last Updated 22 ಫೆಬ್ರುವರಿ 2013, 19:59 IST
ಹೈದರಾಬಾದ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಪೊಲೀಸರು ತಪಾಸಣೆ ನಡೆಸಿದರು
ಹೈದರಾಬಾದ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಪೊಲೀಸರು ತಪಾಸಣೆ ನಡೆಸಿದರು   

ಬೆಂಗಳೂರು: ಹೈದರಾಬಾದ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ, ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್ ಕುಮಾರ್, ಗುಪ್ತಚರ ದಳ ಎಡಿಜಿಪಿ ಗೋಪಾಲ್ ಬಿ. ಹೊಸೂರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರೊಂದಿಗೆ ಚರ್ಚೆ ನಡೆಸಿದ ಪಚಾವ್, ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಪೊಲೀಸ್ ಬಂದೋಬಸ್ತ್ ಬಗ್ಗೆ ಮಾಹಿತಿ ಪಡೆದರು.

`ನೆರೆ ರಾಜ್ಯದಲ್ಲಿ ಬಾಂಬ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಮಾಲ್‌ಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಮುಖ ಅಣೆಕಟ್ಟುಗಳ ಬಳಿಯೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ' ಎಂದು ಬಿಪಿನ್ ಗೋಪಾಲಕೃಷ್ಣ `ಪ್ರಜಾವಾಣಿ'ಗೆ ತಿಳಿಸಿದರು.

`ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ನಗರದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ನಗರ ಸಶಸ್ತ್ರ ಪೊಲೀಸ್ ಪಡೆ (ಸಿಎಆರ್) ಹಾಗೂ ಶ್ವಾನ ದಳದ ಸಿಬ್ಬಂದಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ತಪಸಾಣೆ ನಡೆಸುತ್ತಿದ್ದಾರೆ. ಜತೆಗೆ ನಗರದ ಎಲ್ಲಾ ವಸತಿ ಗೃಹಗಳು, ಹೋಟೆಲ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಅನುಮಾಸ್ಪದ ವ್ಯಕ್ತಿಗಳು ಅಥವಾ ವಸ್ತುಗಳು ಕಂಡು ಬಂದಲ್ಲಿ ಸಾರ್ವಜನಿಕರು ಪೊಲೀಸ್ ನಿಯಂತ್ರಣ ಕೊಠಡಿಗೆ (100) ಮಾಹಿತಿ ನೀಡಬೇಕು' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಮನವಿ ಮಾಡಿದರು.

ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಗಡಿ ಭಾಗದಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ವಾಹನಗಳ ತಪಾಸಣೆ ನಡೆಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)  ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಂಬ್ ಸ್ಫೋಟಗೊಂಡ ಕೆಲ ಕ್ಷಣಗಳಲ್ಲೇ 200 ಸಿಬ್ಬಂದಿಯನ್ನು ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆ ಹೆಚ್ಚುವರಿ 60 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.