ADVERTISEMENT

ನಾಸರ್ ಮದನಿ ಬಿಡುಗಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 20:28 IST
Last Updated 10 ಏಪ್ರಿಲ್ 2013, 20:28 IST

ಬೆಂಗಳೂರು: ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಅಬ್ದುಲ್ ನಾಸರ್ ಮದನಿ ಅವರನ್ನು ಈ ಕೂಡಲೇ ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು ಎಂದು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಒಕ್ಕೂಟವು ಆಗ್ರಹಿಸಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಶೋಕ್ ಮ್ಯಾಥ್ಯೂ ಅವರು, `ಮದನಿ ನಿರಪರಾಧಿಯಾಗಿದ್ದಾರೆ. ಒಂಬತ್ತು ವರ್ಷಗಳನ್ನು ಸೆರೆಮನೆಯಲ್ಲಿ ಕಳೆದಿದ್ದಾರೆ. ಈಗ ಹಲವು ರೋಗಗಳಿಂದ ಬಳಲುತ್ತಿದ್ದಾರೆ. ಆದ್ದರಿಂದ ಮಾನವೀಯತೆಯ ದೃಷ್ಟಿಯಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು' ಎಂದು ಆಗ್ರಹಿಸಿದರು.

`ಹಲವು ರೋಗಗಳಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ನೀಡುವಂತೆ ಕೋರ್ಟ್ ಹೇಳಿದೆ. ಆದರೂ, ಅವರಿಗೆ ಯಾವುದೇ ಚಿಕಿತ್ಸೆಯನ್ನು ಸರಿಯಾಗಿ ನೀಡದೆ ಅವರ ಮೇಲೆ ದೌರ್ಜನ್ಯವನ್ನು ಎಸಗಲಾಗುತ್ತಿದೆ. ಪೊಲೀಸರು ಅವರನ್ನು ವಿನಾಕಾರಣ ಶೋಷಣೆ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

`ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವೇ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿದೆ. ಮದನಿ ವಿಷಯದಲ್ಲಿಯೂ ಬಿಜೆಪಿ ಸರ್ಕಾರ ರಾಜಕೀಯವನ್ನು ಮಾಡುತ್ತಿದೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.