ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳ ಭೂಮಿಯಲ್ಲಿ ಬಡಾವಣೆ ನಿರ್ಮಿಸಿ, ನಿವೇಶನ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಶಿವನಪುರ, ಗೌಡಹಳ್ಳಿ ಮತ್ತು ಕಡಬಗೆರೆ ಗ್ರಾಮಗಳಲ್ಲಿನ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಬಡಾವಣೆ ನಿರ್ಮಿಸಿ, ನಿವೇಶನ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಆರ್.ರಘು ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಈ ದೂರನ್ನು ವಿಚಾರಣೆಗೆ ಅಂಗೀಕರಿಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದರು.
ನ್ಯಾಯಾಲಯದ ಆದೇಶದಂತೆ ಕೃಷ್ಣಪ್ಪ ಮತ್ತು ಇತರರ ವಿರುದ್ಧ ಏಪ್ರಿಲ್ 28ರಂದು ಪ್ರಥಮ ಮಾಹಿತಿ ವರದಿ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು. ಇದರಿಂದ ಬಂಧನದ ಭೀತಿ ಎದುರಿಸುತ್ತಿದ್ದ ಕೃಷ್ಣಪ್ಪ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ನ್ಯಾಯಾಧೀಶರು, ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದರು.
ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ವೈಯಕ್ತಿಕ ಭದ್ರತೆಯನ್ನು ಒದಗಿಸಬೇಕು. ವಿವಾದಿತ ಇ.ಕೆ.ಎನ್‌ಕ್ಲೇವ್‌ನಲ್ಲಿ ಮಾರಾಟವಾಗದೇ ಉಳಿದಿರುವ ನಿವೇಶನಗಳನ್ನು ತನಿಖೆ ಪೂರ್ಣಗೊಳ್ಳುವವರೆಗೂ ಮಾರಾಟ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡಲು ಪ್ರಯತ್ನಿಸಬಾರದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತಿನ ಮೇಲೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.