ADVERTISEMENT

ಪಕ್ಷ ವಿರೋಧಿ ಚಟುವಟಿಕೆ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2012, 19:57 IST
Last Updated 14 ಡಿಸೆಂಬರ್ 2012, 19:57 IST

ಬೆಂಗಳೂರು: ಪಕ್ಷ ವಿರೋಧಿ ಚಟವಟಿಕೆಗಳಲ್ಲಿ ತೊಡಗಿರುವ ಶಾಸಕರ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎಸ್.ಅಶ್ವಥ್‌ನಾರಾಯಣ ಅವರು ಬಿಜೆಪಿ ರಾಜ್ಯ ಘಟಕದ ಕೆ.ಎಸ್. ಈಶ್ವರಪ್ಪ ಅವರನ್ನು ಒತ್ತಾಯಿಸಿದರು.

ಬಿಜೆಪಿಯಿಂದ ಆಯ್ಕೆಯಾಗಿರುವ ಕೆಲವು ಶಾಸಕರು ಕೆಜೆಪಿಯೊಂದಿಗೆ ಗುರುತಿಸಿಕೊಂಡಿರುವುದು ಪಕ್ಷ ವಿರೋಧಿ ಚಟವಟಿಕೆಯಾಗಿದೆ. ಹೀಗಾಗಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮಕೈಗೊಳ್ಳಲು ಬಿಜೆಪಿ ನಾಯಕರು ಹಿಂಜರಿಯಬಾರದು. ಇದರಿಂದ ಬಿಜೆಪಿಯ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಪಕ್ಷದಲ್ಲಿ ಇದ್ದುಕೊಂಡೇ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಶಾಸಕರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂಬುದು ಪಕ್ಷದ ನಿಷ್ಠಾವಂತ ಶಾಸಕರ ಆಗ್ರಹವಾಗಿದೆ ಎಂದರು.

`ನಾನೂ ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಈಚೆಗೆ ಕೆಲವು ಮಾಧ್ಯಮಗಳಲ್ಲಿ ತಾವು ಸೇರಿದಂತೆ ಬೆಂಗಳೂರಿನ ಹಲವು ಬಿಜೆಪಿ ಶಾಸಕರು ಪಕ್ಷ ತೊರೆದು ಕೆಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದು ಸತ್ಯಕ್ಕೆ ದೂರವಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ' ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.