ಬೆಂಗಳೂರು: ‘ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸ ಬೇಕು. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಯನ್ನು ಸಹಿಸಿ ಕೊಳ್ಳಲು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
‘ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಮಗೆ ಎದುರಾಳಿಗಳು. ಆದರೆ, ನಮ್ಮ ಅಭ್ಯರ್ಥಿಯ ಗೆಲುವನ್ನು ಬಯಸದವರು ನಮ್ಮ ಪಕ್ಷದಲ್ಲೂ ಇದ್ದಾರೆ. ಯಾರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೂ ನಿರ್ದಾಕ್ಷಿ ಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ’ ಎಂದರು.
ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಈ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಅಭ್ಯರ್ಥಿ ಎಂದು ಎಲ್ಲ ಕಾರ್ಯಕರ್ತರು ಭಾವಿಸಿ ಕೆಲಸ ಮಾಡಬೇಕು’ ಎಂದರು. ‘ಹೆಬ್ಬಾಳ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದಿಲ್ಲ ಎಂಬುದು ಆ ಪಕ್ಷದ ನಾಯಕರಿಗೂ ಗೊತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಸಲುವಾಗಿಯೇ ಜೆಡಿಎಸ್ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಆದರೆ, ಈ ತಂತ್ರ ಫಲಿಸುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ನಿಶ್ಚಿತ’ ಎಂದರು.
ಮುಖಂಡ ಸಿ.ಕೆ.ಜಾಫರ್ ಷರೀಫ್ ಮಾತನಾಡಿ, ‘ಈ ಚುನಾವಣೆ 2018ರ ವಿಧಾನಸಭಾ ಚುನಾವಣೆಗೆ ಮುನ್ನುಡಿ. ದೇಶದಲ್ಲಿ ಕಾಂಗ್ರೆಸ್ ಸಂಕಷ್ಟದಲ್ಲಿದ್ದಾಗ ಅನೇಕ ಸಲ ಕರ್ನಾಟಕದಲ್ಲಿ ಪಕ್ಷಕ್ಕೆ ಪುನರ್ಜನ್ಮ ಸಿಕ್ಕಿದೆ. ಈ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಚೈತನ್ಯ ತುಂಬಬೇಕು’ ಎಂದರು.
ಸಚಿವರಾದ ರಾಮಲಿಂಗಾರೆಡ್ಡಿ, ಆರ್.ರೋಷನ್ ಬೇಗ್, ಕೃಷ್ಣ ಬೈರೇಗೌಡ, ಅಭ್ಯರ್ಥಿ ಸಿ.ಕೆ.ಅಬ್ದುಲ್ ರೆಹಮಾನ್ ಷರೀಫ್, ಶಾಸಕರಾದ ಬೈರತಿ ಬಸವರಾಜು, ಆರ್.ವಿ.ದೇವರಾಜ್, ವಿಧಾನ ಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ಎಂ.ಆರ್. ಸೀತಾರಾಮ್ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಜಾರ್ಜ್ ಗೈರು: ಸಚಿವ ಕೆ.ಜೆ.ಜಾರ್ಜ್ ಸಭೆಯಲ್ಲಿ ಭಾಗವಹಿಸಲಿಲ್ಲ. ಸಚಿವ ದಿನೇಶ್ ಗುಂಡೂರಾವ್ ಹಾಗೂ ಟಿಕೆಟ್ ವಂಚಿತರಾದ ಬೈರತಿ ಸುರೇಶ್ ಕೂಡಾ ಸಭೆಗೆ ಬಂದಿರಲಿಲ್ಲ. ‘ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಪೂರ್ವ ಸಿದ್ಧತೆ ಸಲುವಾಗಿ ಕೊಡಗು ಜಿಲ್ಲೆಗೆ ತೆರಳಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.