ADVERTISEMENT

ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ: ಪತ್ರಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ಬೆಂಗಳೂರು: `ಪ್ರಜಾವಾಣಿ~ ಪತ್ರಿಕಾ ಕಚೇರಿಯ ಮೇಲೆ ಎಬಿವಿಪಿ ಕಾರ್ಯಕರ್ತರು ಎನ್ನಲಾದ ಕೆಲವು ದುಷ್ಕರ್ಮಿಗಳು ರಾಜ್ಯದ ವಿವಿಧ ಕಡೆ ದಾಳಿ ನಡೆಸುತ್ತಿರುವ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಇಂತಹ ಕೃತ್ಯಗಳನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಗಾಂಧಿನಗರದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ವಿರೋಧಿಸಿ ಕೆಲವು ದುಷ್ಕರ್ಮಿಗಳು ಶಿವಮೊಗ್ಗದ `ಪ್ರಜಾವಾಣಿ~ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಗುಲ್ಬರ್ಗಾದಲ್ಲಿ ಪತ್ರಿಕೆಯನ್ನು ಸುಟ್ಟಿದ್ದಾರೆ. ಇಂತಹ ಘಟನೆಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಅಲ್ಲದೇ ಇಂತಹ ದುಷ್ಕೃತ್ಯ ಎಸಗಿದವರನ್ನು ಬಂಧಿಸಬೇಕೆಂದು ಪೊಲೀಸರಿಗೆ ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ `ಪತ್ರಿಕೆಯಲ್ಲಿ ಪ್ರಕಟವಾದ ಲೇಖನದ ಬಗ್ಗೆ ಆಕ್ಷೇಪಣೆಗಳಿದ್ದರೆ ಪ್ರತಿಕ್ರಿಯೆ ವ್ಯಕ್ತಪಡಿಸಲು ಬೇರೆಯೇ ಆದ ವೇದಿಕೆ ಇದೆ. ಅದನ್ನು ಆ ವೇದಿಕೆಯಲ್ಲಿ ಚರ್ಚೆ ಮಾಡದೇ ಹಲ್ಲೆಯ ಮಾರ್ಗ ಹಿಡಿದಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ. ಇದನ್ನು ಸಂಘ ಸಹಿಸುವುದಿಲ್ಲ~ ಎಂದರು. ಗೂಂಡಾಗಿರಿ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸುತ್ತಿದೆ ಎಂದರು. ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಬೆಂಗಳೂರು ವಕೀಲರ ಬಗ್ಗೆಯೂ ಸಂಘ ಇದೇ ಸಂದರ್ಭದಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಉಪಾಧ್ಯಕ್ಷ ಹಾಗೂ ಉದಯವಾಣಿ ಸಹಾಯಕ ಸಂಪಾದಕ ಬಿ.ವಿ.ಮಲ್ಲಿಕಾರ್ಜುನಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಎನ್.ರಾಜು, ಬೆಂಗಳೂರು ನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜು, ಪ್ರಧಾನ ಕಾರ್ಯದರ್ಶಿ ಸೋಮಶೇಖರ ಗಾಂಧಿ ಮಾತನಾಡಿ, ಎಬಿವಿಪಿ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.